ವಿಜಯಪುರ: ತುರ್ತು ಸಂದರ್ಭದಲ್ಲಿ ರೋಗಿಗಳಿಗೆ ನೆರವಾಗಲು ಜಿಲ್ಲೆಯಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಕ್ತ ಭಂಡಾರ ಸನ್ನದ್ಧತಾ ಪಡೆಯ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಕ್ತದಾನ ಮಾಡುವುದರಿಂದ ರೋಗ ನಿರೋಧಕ ಶಕ್ತಿ ವೃದ್ಧಿಸುವ ಜೊತೆಗೆ ಆರೋಗ್ಯಕ್ಕೆ ಸಹಕಾರಿಯಾಗಲಿದೆ. ಸಂಕಷ್ಟ, ತುರ್ತು ಪರಿಸ್ಥಿತಿಯಲ್ಲಿ ರೋಗಿಗಳಿಗೆ ನೆರವಾಗುವ ಹಿನ್ನೆಲೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ನೆರವಿನೊಂದಿಗೆ ರಕ್ತದಾನ ಶಿಬಿರ ಏರ್ಪಡಿಸುವಂತೆ ಅವರು ಸೂಚನೆ ನೀಡಿದರು.
ಈಗಾಗಲೇ ಕೋವಿಡ್-19 ಸಂಕಷ್ಟ ಎದುರಿಸುತ್ತಿದ್ದು, ಯಾರಾದರೂ ರಕ್ತದಾನ ಮಾಡಲು ಬಯಸಿದ್ದಲ್ಲಿ ಯಾವುದೇ ಸಂಕೋಚವಿಲ್ಲದೆ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿರುವ ರಕ್ತ ನಿಧಿ ಕೇಂದ್ರಕ್ಕೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4-30ರ ಒಳಗೆ ಬಂದು ರಕ್ತದಾನ ಮಾಡಬಹುದು. ಸಾರ್ವಜನಿಕರಿಗೆ ಈ ಕುರಿತು ಮಾಹಿತಿ ಬೇಕಿದ್ದರೆ ರಕ್ತ ಭಂಡಾರ ಕೇಂದ್ರದ ಅಧಿಕಾರಿಗಳಾದ ಸುಮಾ ಅವರನ್ನು ಮೋ.ಸಂ: 9448679583ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಹೇಳಿದರು.
ಜಿಲ್ಲಾ ಆಸ್ಪತ್ರೆ ಸೇರಿದಂತೆ ಜಿಲ್ಲಾದ್ಯಂತ ಒಟ್ಟು 7 ರಕ್ತ ನಿಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, 2020-21ನೇ ಸಾಲಿನಲ್ಲಿ ಸಾಧಿಸಿದ ಪ್ರಗತಿ ಬಗ್ಗೆ ಈ ವೇಳೆ ಪರಿಶೀಲಿಸಲಾಯಿತು.