ವಿಜಯಪುರ: ವಿವಿಧ ರಾಜ್ಯಗಳಿಂದ ಆಗಮಿಸಿರುವ ಕಾರ್ಮಿಕರಿಗೆ ಸರ್ಕಾರದ ಹೊಸ ಮಾರ್ಗಸೂಚಿಯಂತೆ ಏಳು ದಿನ ಸಾಂಸ್ಥಿಕ ಕ್ವಾರಂಟೈನ್ ಅವಧಿ ಪೂರೈಸುವ ಕಾರ್ಮಿಕರನ್ನು ನಂತರ ಕಟ್ಟುನಿಟ್ಟಿನ ಹೋಮ್ ಕ್ವಾರಂಟೈನ್ ಮಾಡಿ ನಿಗಾ ಇಡುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಮಹಾರಾಷ್ಟ್ರ, ಆಂಧ್ರ ಪ್ರದೇಶ, ಗುಜರಾತ್ನಿಂದ ಆಗಮಿಸಿರುವ ಕಾರ್ಮಿಕರನ್ನು ಹೋಮ್ ಕ್ವಾರಂಟೈನ್ ಮಾಡುವಾಗ ಪ್ರತಿಯೊಬ್ಬರು ಕ್ವಾರಂಟೈನ್ ವಾಚ್ ಆ್ಯಪ್‍ನ್ನು ಡೌನ್‍ಲೋಡ್ ಮಾಡುವಂತೆ ಸೂಚಿಸಬೇಕು. ಅಧಿಕಾರಿಗಳು ಕಾರ್ಮಿಕರನ್ನು ಹೋಮ್ ಕ್ವಾರಂಟೈನ್ ಮಾಡಿದ ನಂತರ ಅವರ ಒಂದು ಸೇಲ್ಫಿಯನ್ನು ಈ ಆ್ಯಪ್‍ನಲ್ಲಿ ಅಪ್‍ಲೋಡ್ ಮಾಡುವಂತೆ ಸೂಚಿಸಬೇಕು. ಪ್ರಾಥಮಿಕ ಹಾಗೂ ಪ್ರೌಢಶಾಲೆ ಸೇರಿದಂತೆ ವಿವಿಧ ವಸತಿ ನಿಲಯಗಳಲ್ಲಿ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದ್ದು, ಗ್ರಾಮ ಮಟ್ಟದ ಪಿಡಿಒ, ಗ್ರಾಮ ಲೆಕ್ಕಾಧಿಕಾರಿಗಳು, ತಾಲೂಕು ಮಟ್ಟದ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ತಹಶೀಲ್ದಾರ್ಗಳು ಸೂಕ್ತ ನಿಗಾ ಇಡಬೇಕು ಎಂದರು.
ಅಲ್ಲದೆ ಹೋಮ್ ಕ್ವಾರಂಟೈನ್ ಮಾಡುವಾಗ ವಾಹನಗಳ ಅವಶ್ಯಕತೆ ಎದುರಾದರೆ ಸರ್ಕಾರಿ ವಾಹನಗಳನ್ನು ಬಳಸಿಕೊಳ್ಳಬಹುದಾಗಿದ್ದು, ಅವಶ್ಯಕತೆಗೆ ಅನುಗುಣವಾಗಿ ವಾಹನ ನೀಡಲಾಗುತ್ತದೆ. ಲಕ್ಷಣ ಹೊಂದಿದವರನ್ನು ಕ್ವಾರಂಟೈನ್ ಸಂದರ್ಭದಲ್ಲಿ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗುವುದು. ಒಂದು ವೇಳೆ ಪಾಸಿಟಿವ್ ಬಂದಲ್ಲಿ ಅಂತಹವರಿಗೆ ನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು. ಹಾಗೂ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಿ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗುವುದು ಎಂದು ಮಾಹಿತಿ ನೀಡಿದರು.
ಇದೇ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸಿದ 21,000 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ ಎಂದರು.