ವಿಜಯಪುರ: ವಸತಿ ನಿಲಯಗಳಲ್ಲಿ ನಿಯಮಾನುಸಾರ ಸೌಕರ್ಯಗಳನ್ನು ಒದಗಿಸಲು ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಸರ್ಕಾರಿ ಹಾಸ್ಟೆಲ್‍ಗಳ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಜಿಲ್ಲೆಯ ಪ್ರತಿಯೊಂದು ವಸತಿ ನಿಲಯಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಜೊತೆಗೆ ಎಲ್ಲಾ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿ ನೀಡಿ, ಹಾಜರಾತಿ ನಿರ್ವಹಿಸಬೇಕು ಎಂದು ಸೂಚಿಸಿದರು.
ವಿದ್ಯಾರ್ಥಿಗಳ ಜ್ಞಾನ ಹೆಚ್ಚಿಸುವುದಕ್ಕೆ ವಸತಿ ನಿಲಯಗಳಲ್ಲಿ ಗ್ರಂಥಾಲಯಗಳನ್ನು ಸ್ಥಾಪಿಸಬೇಕು. ಸ್ವಚ್ಛತೆಯ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಬೇಕು. ನಿಯಮಬಾಹಿರ ಚಟುವಟಿಕೆ ಪ್ರೇರೇಪಿಸುವ, ಕರ್ತವ್ಯಲೋಪ ಎಸಗುವ ಇಲಾಖೆ ಸಿಬ್ಬಂದಿ ಮೇಲೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ಸಿಬ್ಬಂದಿಯ ಅಸಮರ್ಪಕ ನಿರ್ವಹಣೆ ತಡೆಗಟ್ಟಲು ಉಪವಿಭಾಗ ಮಟ್ಟದಲ್ಲಿ ಉಪವಿಭಾಗಾಧಿಕಾರಿಗಳು, ಪೊಲೀಸ್ ಉಪ ಅಧೀಕ್ಷಕರು ಹಾಗೂ ಉಪನಿರ್ದೇಶಕರನ್ನು ಒಳಗೊಂಡ ಜಿಲ್ಲಾಮಟ್ಟದ ಸಮಿತಿ ರಚಿಸಲಾಗುವುದು. ಈ ಸಮಿತಿಯು ತಿಂಗಳಿಗೊಮ್ಮೆ ವಸತಿ ನಿಲಯಗಳಿಗೆ ಭೇಟಿ ನೀಡಿ, ವಸತಿ ನಿಲಯಗಳ ಸುಧಾರಣೆಗಾಗಿ ಕ್ರಮಕೈಗೊಳ್ಳಬೇಕು ಎಂದರು.
ಓದಿ: ಕೃಷಿ ಮಸೂದೆ ವಿರೋಧಿಸಿ ರಾಜ್ಯದಲ್ಲಿ ರೈತ ಮಹಾಪಂಚಾಯತ್; ಮುಖಂಡರ ಆಗಮನ