ವಿಜಯಪುರ: ಕೋವಿಡ್ -19 ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡುತ್ತಿದ್ದ ಯುವಕನಿಗೆ, ತಹಶೀಲ್ದಾರ್ ರಸ್ತೆ ಸ್ವಚ್ಛಗೊಳಿಸುವ ಶಿಕ್ಷೆಯನ್ನು ನೀಡಿದ ಪ್ರಸಂಗ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ನಡೆದಿದೆ.
ಪ್ರಕಾಶ ಚಳ್ಳಮರದ (24) ಯುವಕ ಶಿಕ್ಷೆಗೆ ಗುರಿಯಾಗಿದ್ದಾನೆ. ಆತನಿಗೆ ಇಂದಿನಿಂದ ಮೇ. 5 ರವರೆಗೆ ಪಟ್ಟಣದಲ್ಲಿ ಸ್ವಚ್ಚತಾ ಕಾರ್ಯ ಮಾಡಲು ಸೂಚನೆ ನೀಡಲಾಗಿತ್ತು. ಇದರಿಂದ ಅವಮಾನಿತನಾದ ಪ್ರಕಾಶ ಆತ್ಮಹತ್ಯೆಗೆ ಯತ್ನ ನಡೆಸಿದ್ದಾನೆ. ವಿಷ ಸೇವಿಸಿದ್ದ, ಆತನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ವಿಜಯಪುರ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.