ಮುದ್ದೇಬಿಹಾಳ: ಕಬ್ಬಿಗೆ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಕರ್ನಾಟಕ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ದನಗೌಡ ಬಿರಾದಾರ, ತಾಲ್ಲೂಕಿನ ಬಾಲಾಜಿ ಶುಗರ್ಸ್ ಹಾಗೂ ನಾಯನೇಗಲಿಯ ಸದಾಶಿವ ಸಕ್ಕರೆ ಕಾರ್ಖಾನೆ ಕಬ್ಬು ಬೆಳೆಗಾರರಿಗೆ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆ ನೀಡದೆ ವಂಚಿಸುತ್ತಿದೆ ಎಂದು ದೂರಿದರು.
ರೈತ ಮುಖಂಡ ಅರವಿಂದ ಕೊಪ್ಪ ಮಾತನಾಡಿ, ಕಬ್ಬು ಬೆಳೆಗಾರರ ಹಿತಕ್ಕಾಗಿ ಇರುವ ಕಬ್ಬು ಬೆಳೆ ಬೆಲೆ ನಿಗದಿ ಮಂಡಳಿ, ಕಬ್ಬು ಬೆಳೆಗಾರರ ಹಿತ ಕಾಯುವಲ್ಲಿ ವಿಫಲವಾಗಿದೆ. ರೈತರ ವಿಷಯದಲ್ಲಿ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಕೂಡಲೇ ಸರ್ಕಾರ ನಿಗದಿ ಮಾಡಿದ ಬೆಂಬಲ ಬೆಲೆಯನ್ನು ನೀಡಬೇಕು ಎಂದು ಒತ್ತಾಯಿಸಿದರು. ಬಳಿಕ ತಹಶೀಲ್ದಾರ್ ಜಿ.ಎಸ್.ಮಳಗಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.