ವಿಜಯಪುರ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಕರ್ನಾಟಕದ ಭೀಮಾ ನದಿಗೆ ಉಜನಿ ಜಲಾಶಯದಿಂದ 80 ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಭೀಮಾನದಿಯ ಬಹುತೇಕ ಸಂಪರ್ಕ ಸೇತುವೆಗಳು ಜಲಾವೃತವಾಗಿವೆ. ಉಮರಾಣಿ-ಸೈದಾಪುರ ಬ್ಯಾರೇಜ್ ಸಂಪೂರ್ಣ ಮುಳುಗಿದ್ದು, ಮಹಾರಾಷ್ಟ್ರ-ಕರ್ನಾಟಕ ಸಂಪರ್ಕ ಕಡಿತಗೊಂಡಿದೆ.
ಇದರ ಜತೆ ಭೀಮಾನದಿಗೆ ಹೊಂದಿಕೊಂಡಿರುವ ತಳಮಟ್ಟದ ಸೇತುವೆ ಸಹ ಸಂಪೂರ್ಣ ಮುಳುಗಡೆಯಾಗಿದೆ. ಇತ್ತೀಚಿಗೆ ಮುಳುಗಡೆಯಾದ ಸೇತುವೆ ಮೇಲೆ ಸಂಚಾರ ಮಾಡಿ ಇಬ್ಬರು ಪ್ರಾಣ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಹಾಗೂ ಕರ್ನಾಟಕದ ಸೇತುವೆ ಹೊಂದಿಕೊಂಡಿರುವ ಗ್ರಾಮದಲ್ಲಿ ಎಚ್ಚರಿಕೆ ವಹಿಸಲಾಗಿದೆ. ಸ್ಥಳೀಯ ಯುವಕರು ಸೇತುವೆ ದಾಟಲು ಮುಂದಾಗಿರುವ ಕುರಿತು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದಸೂರ, ಉಮರಜ, ಗೋವಿಂದಪುರ, ನಿವರಗಿ, ಹೊಖೆಸಂಖ ಉಮರಾಣಿ, ಶಿರನಾಳ, ಅಣಜಿ, ಟಾಕಳಿ, ಧೂಳಖೇಡ, ಹಿಂಗಣಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಬಳಿಯ ಡೋಣಿ ನದಿಯಲ್ಲಿ ಅಧಿಕ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ಸುತ್ತಮುತ್ತಲಿನ ಜಮೀನುಗಳಿಗೆ ನೀರು ನುಗ್ಗಿದೆ. ಇದರಿಂದ ರೈತರು ಆತಂಕಗೊಂಡಿದ್ದಾರೆ.