ವಿಜಯಪುರ: ಲಿಂಗಾಯತರಿಗೆ ಶೇ.16ರಷ್ಟು ಮೀಸಲಾತಿ ನೀಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರು ಪತ್ರ ಬರೆದಿದ್ದಾರೆ. ಮಹಾರಾಷ್ಟ್ರದಲ್ಲೂ ಲಿಂಗಾಯತರಿಗೆ ಇಷ್ಟು ಮೀಸಲಾತಿ ನೀಡಲಾಗಿದೆ ಎಂಬುದನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕರ್ನಾಟಕದ ಜನಸಂಖ್ಯೆಯ ಪೈಕಿ ಶೇ.16-18ರಷ್ಟು ಲಿಂಗಾಯತರಿದ್ದಾರೆ. ಈ ಸಮುದಾಯಕ್ಕೆ ಶಿಕ್ಷಣ, ಉದ್ಯೋಗ ಸೇರಿದಂತೆ ಇತರೆ ಸೌಲಭ್ಯಗಳಲ್ಲಿ ಮೀಸಲಾತಿ ಕಲ್ಪಿಸಬೇಕು. ರಾಜ್ಯದ 6.50 ಕೋಟಿ ಜನಸಂಖ್ಯೆಯ ಪೈಕಿ ಲಿಂಗಾಯತರ ಜನಸಂಖ್ಯೆ ಒಂದು ಕೋಟಿಗಿಂತಲೂ ಹೆಚ್ಚಿದೆ. ಇಷ್ಟು ದೊಡ್ಡ ಜನಸಂಖ್ಯೆಗೆ ಸದ್ಯ ಸಿಗುತ್ತಿರುವ ಮೀಸಲಾತಿ ಸೌಲಭ್ಯಗಳಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಶಿಕ್ಷಣ, ಉದ್ಯೋಗ, ಸ್ಕಾಲರ್ಶಿಪ್ ಸೇರಿದಂತೆ ಎಲ್ಲ ಸೌಲಭ್ಯಗಳಲ್ಲಿ ಲಿಂಗಾಯತರಿಗೆ ನ್ಯಾಯ ದೊರಕಿಸಿಕೊಡಬೇಕು. ಲಿಂಗಾಯತರಿಗೆ ಅಭಿವೃದ್ಧಿ ನಿಗಮ ಸ್ಥಾಪಿಸಿ, ₹100-200 ಕೋಟಿ ಅನುದಾನ ಒದಗಿಸಿದರೆ ಹೆಚ್ಚು ಪ್ರಯೋಜನವಾಗುವದಿಲ್ಲ. ಈ ಅಭಿವೃದ್ಧಿ ನಿಗಮ ಸ್ಥಾಪನೆ ಎಂಬುದು ಕೇವಲ ಕಣ್ಣೊರೆಸುವ ತಂತ್ರವಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.