ವಿಜಯಪುರ: ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನೋತ್ಸವವನ್ನು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕ್ರೀಡಾಂಗಣದಲ್ಲಿ ಆಚರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.
ಪ್ರತಿವರ್ಷ ಸ್ವಾತಂತ್ರ್ಯ ದಿನ ಆಚರಿಸಲಾಗುತ್ತಿದ್ದ ಡಾ.ಬಿ.ಆರ್ ಅಂಬೆಡ್ಕರ್ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್ ಕಾಮಗಾರಿ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಇಲ್ಲಿ ಯಾವುದೇ ರೀತಿಯ ಸಾರ್ವಜನಿಕ ಸಮಾರಂಭ ಜರುಗಿಸಲು ಸಾಧ್ಯವಿಲ್ಲ. ಹಾಗಾಗಿ ಈ ಬಾರಿ ಸ್ವಾತಂತ್ರ್ಯ ದಿನವನ್ನು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕ್ರೀಡಾಂಗಣದಲ್ಲಿ ಆಚರಿಸಲಾಗುತ್ತದೆ ಎಂದು ಹೇಳಿದರು.
ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಪಟ್ಟಂತೆ ಪೂರ್ವ ಸಿದ್ಧತೆಗಾಗಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಈ ಮಾಹಿತಿ ನೀಡಿದರು. ಅಧಿಕಾರಿಗಳು ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಪಟ್ಟಂತೆ ಅವಶ್ಯಕ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಯಾವುದೇ ಲೋಪಕ್ಕೆ ಅವಕಾಶ ನೀಡದೇ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಬೇಕು. ಶಿಷ್ಟಾಚಾರದಂತೆ ಗಣ್ಯರನ್ನು ಆಹ್ವಾನಿಸಬೇಕು ಎಂದು ಸೂಚಿಸಿದರು.
ಕೋವಿಡ್ 19 ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಪ್ರವೇಶದ್ವಾರದಲ್ಲಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಿಕೊಳ್ಳಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮದ ಪೂರ್ವ ಸಿದ್ದತೆಯಾಗಿ ಪರೇಡ್ ಮಾಡಲು ಹಾಗೂ ದ್ವಜಾರೋಹಣ ಮಾಡಲು ಎಲ್ಲ ಸಿದ್ಧತೆಗಳನ್ನು ಮುಂಚಿತವಾಗಿಯೇ ಮಾಡಿಕೊಂಡಿರಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಸಾಮಾಜಿಕ ಅಂತರದಲ್ಲಿ ಆಸನದ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಸೇರಿದಂತೆ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಉಪಸ್ಥಿತರಿದ್ದರು.