ವಿಜಯಪುರ: ಎಪಿಎಂಸಿ ಈರುಳ್ಳಿ ಮಾರುಕಟ್ಟೆಯಲ್ಲಿ ಮಧ್ಯವರ್ತಿಗಳ ಹಾವಳಿ ತಡೆಗಟ್ಟುವಂತೆ ಜಯ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿ ಕ್ವಿಂಟಲ್ ಈರುಳ್ಳಿಗೆ 20 ಸಾವಿರ ಬೆಲೆ ಇದೆ. ಆದ್ರೆ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಮಧ್ಯವರ್ತಿಗಳು ರೈತರ ಈರುಳ್ಳಿ ಬೆಲೆಗೆ ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ. ರೈತರಿಗೆ ವರ್ಷಕ್ಕೊಮ್ಮೆ ಮಾತ್ರ ಈರುಳ್ಳಿಗೆ ಉತ್ತಮ ಬೆಲೆ ಸಿಗುತ್ತದೆ. ನೇರವಾಗಿ ರೈತರಿಗೆ ತಲುಪಬೇಕಾದ ಲಾಭಾಂಶ ಮಧ್ಯವರ್ತಿಗಳ ಕುತಂತ್ರದಿಂದ ರೈತರ ಕೈ ತಪ್ಪಿ ಸಂಕಷ್ಟ ಪಡುವಂತಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಶನಿವಾರ 20ಸಾವಿರ ರೂ. ಇದ್ದ ಈರುಳ್ಳಿ ಬೆಲೆ ಮಧ್ಯವರ್ತಿಗಳ ಹಾವಳಿಯಿಂದ ರವಿವಾರ 2 ಸಾವಿರಕ್ಕೆ ತಲುಪಿದೆ. ಹಾಗಾಗಿ ಜಿಲ್ಲಾಧಿಕಾರಿಗಳು ಮಧ್ಯವರ್ತಿಗಳಿಗೆ ಕಡಿವಾಣ ಹಾಕಿ ಹಣವನ್ನು ರೈತರ ಖಾತೆಗಳಿಗೆ ಜಮಾ ಮಾಡುವಂತೆ ಜಯ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ವೈ ಎಸ್ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.