ಮುದ್ದೇಬಿಹಾಳ: ಈ ರಾಜ್ಯದ ಮಣ್ಣಿನ ಮಗ, ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು, ಬಡವರ, ರೈತರ ಪರ ನೂರಾರು ಯೋಜನೆಗಳನ್ನು ತಮ್ಮ ಅವಧಿಯಲ್ಲಿ ಜಾರಿಗೊಳಿಸಿದ ಕೀರ್ತಿ ಹೊಂದಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿರುವ ಜೆಡಿಎಸ್ ಪಕ್ಷ ಬಿಟ್ಟು ಎಲ್ಲೂ ಹೋಗುವುದಿಲ್ಲ ಎಂದು ಜೆಡಿಎಸ್ ರಾಜ್ಯ ಮುಖಂಡ ರಾಜುಗೌಡ ಪಾಟೀಲ(ಕುದುರಿಸಾಲವಾಡಗಿ) ಹೇಳಿದರು.
ಮತಕ್ಷೇತ್ರದ ತಾಳಿಕೋಟಿ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ನೂತನ ಪದಾಧಿಕಾರಿಗಳ ಆಯ್ಕೆ ಕುರಿತ ಸಭೆಯಲ್ಲಿ ಅವರು ಮಾತನಾಡಿದರು. ಸಮ್ಮಿಶ್ರ ಸರ್ಕಾರದಲ್ಲಿ ಕಟ್ಟಿದ ಮನೆಗಳನ್ನು ಈಗಿನ ಮುಖ್ಯಮಂತ್ರಿಗಳು ಲೋಕಾರ್ಪಣೆ ಮಾಡುತ್ತಿದ್ದಾರೆ. ರೈತರ ಪರವಾದ ಪಕ್ಷ ಜೆಡಿಎಸ್ ಪಕ್ಷವಾಗಿದೆ ಎಂದು ಹೇಳಿದರು.
ಸರ್ಕಾರ ಕೋವಿಡ್ ರೋಗಿಗಳಿಗೆ ವ್ಯವಸ್ಥಿತವಾಗಿ ಆಸ್ಪತ್ರೆಯಲ್ಲಿ ಬೆಡ್ ಕೊಡುವ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗಿಲ್ಲ. ಜಿಲ್ಲೆಯ ಅಭಿವೃದ್ಧಿಗೆ ಸಮ್ಮಿಶ್ರ ಸರ್ಕಾರ ನೀಡಿದ್ದ 600 ಕೋಟಿ ರೂ.ಅನುದಾನ ಈಗಿನ ಬಿಜೆಪಿ ಸರ್ಕಾರ ವಾಪಸ್ ತೆಗೆದುಕೊಂಡಿದ್ದಾಗಿ ಸ್ವತಃ ಬಿಜೆಪಿ ಶಾಸಕರೇ ಹೇಳುತ್ತಿದ್ದಾರೆ ಎಂದು ಹೇಳಿದರು.
ಜೆಡಿಎಸ್ ರಾಜ್ಯ ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ಮಂಗಳಾದೇವಿ ಬಿರಾದಾರ ಮಾತನಾಡಿ, ಬಿಜೆಪಿ ಸರ್ಕಾರದಲ್ಲಿ ಡ್ರಗ್ಸ್ ಮಾಫಿಯಾ ಮಿತಿ ಮೀರಿದೆ. ಯಡಿಯೂರಪ್ಪನವರು ಅಧಿಕಾರಕ್ಕೆ ಬರುತ್ತಲೇ ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರು. ಆದರೆ ಸಾಲ ಮನ್ನಾ ಮಾಡಿಲ್ಲ. ಈ ಸರ್ಕಾರ ಎಲ್ಲಾ ರಂಗಗಳಲ್ಲೂ ವಿಫಲವಾಗಿದ್ದು ನೈತಿಕತೆ ಕಳೆದುಕೊಂಡಿದೆ ಎಂದು ಟೀಕಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಅರವಿಂದ ಕಾಶಿನಕುಂಟಿ, ಮುದ್ದೇಬಿಹಾಳ ತಾಲೂಕಾಧ್ಯಕ್ಷ ಪ್ರಭುಗೌಡ ಪಾಟೀಲ ಮತ್ತಿತರರು ಇದ್ದರು.