ವಿಜಯಪುರ: ಆಲಮಟ್ಟಿ ಜಲಾಶಯದ ಎತ್ತರವನ್ನು 519.60 ಮೀಟರ್ನಿಂದ 524.19ಕ್ಕೆ ಹೆಚ್ಚಿಸುವುದರಿಂದ 100 ಟಿಎಂಸಿ ನೀರು ಸಂಗ್ರಹವಾಗುತ್ತದೆ. ಜತೆಗೆ 6 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಬಹುದಾಗಿದೆ ಎಂದು ವಿಧಾನ್ ಪರಿಷತ್ ಸರ್ಕಾರಿ ಭರವಸೆಗಳ ಸಮಿತಿ ಅಧ್ಯಕ್ಷ ಕೆ.ಸಿ.ಕೊಂಡಯ್ಯ ಹೇಳಿದರು.
ಆಲಮಟ್ಟಿಯ ಕೆಬಿಜೆಎನ್ಎಲ್ ಕಚೇರಿ ಸಭಾಂಗಣದಲ್ಲಿ ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಿಸುವ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಜಲಾಶಯದ ಎತ್ತರ ಹೆಚ್ಚಿಸಲು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಆದರೆ ಕೆಲ ರಾಜ್ಯಗಳು ತಡೆಯಾಜ್ಞೆ ತಂದಿದ್ದು, ಅದರ ತೆರವಿನ ಬಳಿಕ ಭೂ ಸ್ವಾಧೀನ ಪ್ರಕ್ರಿಯೆ ನಡೆಯಲಿದೆ. ಅಲ್ಲದೆ ಹೊಸ ಭೂ ಸ್ವಾಧೀನ ಕಾಯ್ದೆಯಂತೆ ಹಿನ್ನೀರಿನಲ್ಲಿ ಮುಳುಗಡೆಯಾಗಲಿರುವ ಜಮೀನುಗಳಿಗೆ ಸೂಕ್ತ ಪರಿಹಾರ, ಪುನರ್ವಸತಿ ಮತ್ತು ಸ್ಥಳಾಂತರಕ್ಕಾಗಿ ಪರಿಹಾರ ನೀಡಲಾಗುವದು ಎಂದರು.
ಮೀಸಲಾತಿ
ಆಲಮಟ್ಟಿ, ನಾರಾಯಣಪುರ ಹಿನ್ನೀರಿನಲ್ಲಿ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಉದ್ಯೋಗದಲ್ಲಿ ಮೀಸಲಾತಿ 2050ರವರೆಗೆ ವಿಸ್ತರಿಸಬೇಕು ಎಂದು ಕೃಷ್ಣಾ ನಿಲುಗಡೆ ಕ್ಷೇಮಾಭಿವೃದ್ಧಿ ಸಂಸ್ಥೆ ಸಂಚಾಲಕ ಮುತ್ತಲದಿನ್ನಿ, ಕೊಂಡಯ್ಯರಿಗೆ ಮನವಿ ಸಲ್ಲಿಸಿದರು. ಸಭೆಯಲ್ಲಿ ಸಮಿತಿ ಸದಸ್ಯರಾದ ಬಸವರಾಜ ಹೊರಟ್ಟಿ, ಶ್ರೀಕಂಠೆಗೌಡ, ತೇಜಸ್ವಿನಿಗೌಡ ಸೇರಿ ಇನ್ನಿತರರು ಉಪಸ್ಥಿತರಿದ್ದರು.