ವಿಜಯಪುರ: ರಾಜ್ಯದ ವಸತಿ ನಿಲಯಗಳಲ್ಲಿ ಪಾರದರ್ಶಕತೆ ಇಲ್ಲದೇ ಹೋದರೆ ಅಂತಹ ವಸತಿ ನಿಲಯದ ಅಧಿಕಾರಿಗಳಿಗೆ ಯಾವುದೇ ನೋಟಿಸ್ ನೀಡದೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು.
ನಗರದ ಕನಕದಾಸ ಬಡಾವಣೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ನಿಲಯಕ್ಕೆ ಭೇಟಿ ನೀಡಿ ವಸತಿ ನಿಲಯದ ಸ್ವಚ್ಛತೆ, ಊಟದ ವ್ಯವಸ್ಥೆ ಪರಿಶೀಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 2,400 ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಿವೆ. ಇಲ್ಲಿ ಕನಿಷ್ಠ 9 ಲಕ್ಷ ವಿದ್ಯಾರ್ಥಿಗಳು ವಾಸವಿದ್ದು, ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಸುಮಾರು 37 ಲಕ್ಷ ವಿದ್ಯಾರ್ಥಿಗಳು ಇಂತಹ ವಸತಿ ನಿಲಯಗಳ ಪ್ರಯೋಜನ ಪಡೆದುಕೊಂಡಿದ್ದಾರೆ. ಹೀಗಾಗಿ ವಸತಿ ನಿಲಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಅಗತ್ಯ ಸಿಬ್ಬಂದಿಯನ್ನು ಒದಗಿಸಲಾಗಿದೆ. ವಿದ್ಯಾರ್ಥಿಗಳಿಂದ ದೂರು ಬಂದರೆ, ಪಾರದರ್ಶಕತೆ ಕಾಪಾಡದಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ಮುಖ್ಯವಾಗಿ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ನೀಡಬೇಕು. ಸ್ವಚ್ಛತೆ ಕಡೆ ಗಮನ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯದ ಎಲ್ಲಾ ಶಾಸಕರು, ಜನಪ್ರತಿನಿಧಿಗಳಾಗಲಿ ಆಗಾಗ ತಮ್ಮ ಕ್ಷೇತ್ರದ ವಸತಿ ನಿಲಯಗಳಿಗೆ ಭೇಟಿ ನೀಡಬೇಕೆಂದು ವಿಧಾನಸಭೆ ಮತ್ತು ಪರಿಷತ್ನಲ್ಲಿ ಮನವಿ ಮಾಡಿರುವುದಾಗಿ ತಿಳಿಸಿದರು.
ವಿದ್ಯಾರ್ಥಿನಿಯರ ಜೊತೆ ಮಾತುಕತೆ: ಇದೇ ವೇಳೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ವಸತಿ ನಿಲಯದ ವಿದ್ಯಾರ್ಥಿನಿಯರ ಜೊತೆ ಮಾತುಕತೆ ನಡೆಸಿದರು. ಊಟದ ಗುಣಮಟ್ಟ, ಸ್ವಚ್ಛತೆ, ತಮ್ಮನ್ನು ಯಾವ ರೀತಿ ನೋಡಿಕೊಳ್ಳಲಾಗುತ್ತಿದೆ ಎನ್ನುವ ಮಾಹಿತಿ ಪಡೆದುಕೊಂಡು, ಅಧಿಕಾರಿಗಳಿಗೆ ನಿಮ್ಮ ಕುಟುಂಬದ ಸದಸ್ಯರಂತೆ ವಿದ್ಯಾರ್ಥಿಗಳನ್ನು ನೋಡಿಕೊಳ್ಳಬೇಕೆಂದು ಸೂಚಿಸಿದರು.
ಈ ಸುದ್ದಿಯನ್ನೂ ಓದಿ: ಡ್ರಗ್ಸ್ ದಂಧೆಯಲ್ಲಿ ಬಿಡಿಎ ಬ್ರೋಕರ್: ಬೆಂಗಳೂರಲ್ಲಿ ವಿದೇಶಿ ಫುಟ್ಬಾಲ್ ಆಟಗಾರ ಸೇರಿ ನಾಲ್ವರು ಅರೆಸ್ಟ್
ಮಾಜಿ ಸಚಿವ ಎಂ.ಸಿ.ಮನಗೂಳಿ ನಿಧನದ ನಂತರ ತೆರವಾಗಿರುವ ಸಿಂದಗಿ ಕ್ಷೇತ್ರದಲ್ಲಿ ನಡೆಯಲಿರುವ ಉಪಚುನಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಪರಿಸ್ಥಿತಿ ಅವಲೋಕಿಸಿ ಯಾರಿಗೆ ಟಿಕೇಟ್ ನೀಡಬೇಕು ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿಎಂ ಯಡಿಯೂರಪ್ಪ ಹಾಗೂ ಕೇಂದ್ರ ನಾಯಕರು ತೀರ್ಮಾನಿಸುತ್ತಾರೆ. ಅವರು ಯಾರಿಗೇ ಟಿಕೆಟ್ ನೀಡಲಿ, ಬಿಜೆಪಿ ಗೆಲುವು ನಿಶ್ಚಿತ ಎಂದರು.