ವಿಜಯಪುರ: ಜಿಲ್ಲೆಯ ಸಿಂದಗಿ ತಹಶೀಲ್ದಾರ್ ಕಚೇರಿಯಲ್ಲಿ ಜಿಲ್ಲಾ ಪ್ರವಾಹ ಪರಿಸ್ಥಿತಿ ನಿಯಂತ್ರಣ ಕುರಿತು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಪರಿಶೀಲನಾ ಸಭೆ ನಡೆಸಿದ್ರು.
ಭೀಮಾ ಮತ್ತು ದೋಣಿ ನದಿ ಪ್ರವಾಹ ಹಾಗೂ ಅತಿವೃಷ್ಟಿಯಿಂದ ಹಾನಿಯಾದ ಕೃಷಿ ತೋಟಗಾರಿಕಾ ಬೆಳೆಗಳು, ಮೂಲಭೂತ ಸೌಕರ್ಯಗಳಾದ ರಸ್ತೆ, ಸೇತುವೆ ಮತ್ತು ಇತರೆ ಸೌಕರ್ಯಗಳ ಬಗ್ಗೆ ನಿಖರ ಮತ್ತು ಅಧಿಕೃತ ಸಮೀಕ್ಷಾ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಸಮೀಕ್ಷೆ ಕೈಗೊಳ್ಳುವ ಸಂದರ್ಭದಲ್ಲಿ ಯಾವುದೇ ದೂರುಗಳು ಬರದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈಗಾಗಲೇ ಈ ಹಿಂದೆ ಭಾಗಶ: ಮತ್ತು ಪೂರ್ಣ ಮನೆಬಿದ್ದ ಸಂದರ್ಭದಲ್ಲಿ 50 ಸಾವಿರ ರೂ. ಗಳಿಂದ 5 ಲಕ್ಷ ರೂ.ಗಳ ವರೆಗೆ ಪರಿಹಾರ ನೀಡಲಾಗುತ್ತಿದೆ. ಮನೆ ದುರಸ್ತಿಗಾಗಿ 3 ಲಕ್ಷ ರೂ.ಗಳನ್ನು ನೀಡುತ್ತಿದ್ದು, ನೈಜ ಸ್ಥಿತಿಯ ಸಮೀಕ್ಷಾ ವರದಿ ಸಲ್ಲಿಸುವಂತೆ ಹೇಳಿದ್ರು.
ಜಿಲ್ಲೆಯ ಕಾಳಜಿ ಕೇಂದ್ರ ಗಳಲ್ಲಿ ಸಂತ್ರಸ್ತರ ರಕ್ಷಣೆಗೆ ಪೊಲೀಸ್ ಇಲಾಖೆಯಿಂದ ವಿಶೇಷ ಗಮನ ನೀಡಬೇಕು. ಸರ್ಕಾರದ ನಿರ್ದೇಶನಗಳ ಅನ್ವಯ ಊಟ, ಆರೋಗ್ಯ ಚಿಕಿತ್ಸಾ ಮತ್ತು ಇತರೆ ಸೌಲಭ್ಯಗಳನ್ನು ಕಲ್ಪಿಸಬೇಕು. ಬಾಣಂತಿಯರು ಮತ್ತು ಗರ್ಭಿಣಿಯರ ಬಗ್ಗೆ ವಿಶೇಷ ಕಾಳಜಿ ಮತ್ತು ಚಿಕಿತ್ಸೆ ಒದಗಿಸಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಸಮನ್ವಯತೆಯಿಂದ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.ಈವರೆಗೆ ಪ್ರವಾಹ ಪರಿಸ್ಥಿತಿ ನಿರ್ವಹಣೆ, ಜನರ ರಕ್ಷಣೆ, ಕೋವಿಡ್ ಸಂದರ್ಭದಲ್ಲಿ ಜಿಲ್ಲಾಡಳಿತ ಮತ್ತು ತಾಲೂಕಾಡಳಿತ ಕೈಗೊಂಡ ಕಾರ್ಯಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
ಸಭೆಯಲ್ಲಿ ಶಾಸಕ ಎಂ.ಸಿ ಮನಗೂಳಿ, ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್, ಜಿಪಂ ಸಿಇಒ ಗೋವಿಂದ ರೆಡ್ಡಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.