ವಿಜಯಪುರ: ಮುಂದಿನ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆ ಮರು ಆರಂಭಿಸಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಕಿಸಿದರು.
ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ನಗರದ ಸುಂದರೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಾದಯಾತ್ರೆಯನ್ನು ಮೋಜು ಮಸ್ತಿ ರೀತಿ ನಡೆಸುತ್ತಿದ್ದಾರೆ. ಭೂರಿಭೋಜನ ಸವಿದು, ಕುಣಿದು ಕುಪ್ಪಳಿಸಿ ಪಾದಯಾತ್ರೆ ನಡೆಸುತ್ತಿದ್ದಾರೆ. ಇದೊಂದು ರೀತಿಯ ಪಾದಯಾತ್ರೆಯ ಗಂಭೀರತೆಯನ್ನೇ ಹಾಳು ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಚುನಾವಣೆ ಘೋಷಣೆಯಾದರೆ ಓಡಾಡಲಾಗದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ. ಅವರಿಗೆ ಈ ರೀತಿಯ ಪಾದಯಾತ್ರೆ ಮಾಡುವುದರಿಂದ ಆರೋಗ್ಯ ಕಾಪಾಡಿಕೊಳ್ಳಲು ಸಹಾಯಕವಾಗಲಿದೆ. ಹೀಗಾಗಿ ಮೇಕೆದಾಟು ಯೋಜನೆ ಜಾರಿಗಾಗಿ ಪಾದಯಾತ್ರೆ ನಡೆಸುತ್ತಿದ್ದಾರೆ. ಇದು ಜನರಿಗಾಗಿ ಅಲ್ಲ, ಅವರ ಆರೋಗ್ಯಕ್ಕಾಗಿ ನಡೆಸಲಾಗುತ್ತಿರುವ ಪಾದಯಾತ್ರೆ ಎಂದು ಯತ್ನಾಳ್ ವ್ಯಂಗ್ಯವಾಡಿದರು.
ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು: ರಾಜ್ಯ ಬಜೆಟ್ನಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ವಿಜಯಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಯ ಮಂಜೂರಾತಿಗಾಗಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೇನೆ. ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಿ ಈ ಭಾಗದ ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡಬೇಕು ಎಂದು ಸಿಎಂ ಬಳಿ ಮನವಿ ಸಲ್ಲಿಸಲಾಗಿದೆ ಎಂದರು. ವಿಜಯಪುರ ಜಿಲ್ಲೆಯ ತೋಟಗಾರಿಕೆ ಬೆಳೆಗಳಿಗೆ ಹಾಗೂ ಸಮಗ್ರ ಅಭಿವೃದ್ಧಿಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಬೇಕು ಎಂದು ಮನವಿ ಮಾಡಿರುವುದಾಗಿ ತಿಳಿಸಿದರು.
ಕೇಂದ್ರದ ಕೆಲಸಕ್ಕೆ ಮೆಚ್ಚುಗೆ: ಉಕ್ರೇನ್ನಲ್ಲಿ ಸಿಲುಕಿರುವ ಕರ್ನಾಟಕದ ವಿದ್ಯಾರ್ಥಿಗಳ ರಕ್ಷಣೆ ಕುರಿತು ಪ್ರತಿಕ್ರಿಯೆ ನೀಡಿದ ಶಾಸಕ ಯತ್ನಾಳ್, ಪ್ರಧಾನಿ ಮೋದಿ ಎಲ್ಲರ ಜತೆ ಉತ್ತಮ ಸಂಬಂಧ ಹೊಂದಿರುವ ಕಾರಣ ಉಕ್ರೇನ್ ದೇಶದಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆದುಕೊಂಡು ಬರಲಾಗುತ್ತಿದೆ. ಅದೇ ಪಾಕಿಸ್ತಾನದ ಹೆಸರು ಹೇಳಿದರೆ ಬೇರೆ ದೇಶಗಳು ಸಹಾಯಹಸ್ತ ಚಾಚುವುದಿಲ್ಲ. ಪಾಕಿಸ್ತಾನ ಸಹ ಭಾರತದ ಹೆಸರು ಹೇಳಿ ಬದುಕುತ್ತಿದೆ ಎಂದರು.