ವಿಜಯಪುರ : ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸರ್ಕಾರದ ಕೆಲ ಶಾಸಕರು ಅಸಮಾಧಾನಗೊಂಡಿದ್ದಾರೆ. ಈ ಮಧ್ಯೆ ಇದಕ್ಕೂ, ತಮಗೂ ಸಂಬಂಧವಿಲ್ಲದಂತೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆಯಲ್ಲಿ ಬ್ಯುಸಿಯಾಗಿದ್ದಾರೆ.
ಜಿಲ್ಲೆಯ ಚಡಚಣ ತಾಲೂಕಿನ ವಿವಿಧ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೇರವೇರಿಸಿದರು.
ಇದಕ್ಕೂ ಮುನ್ನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಾಗಠಾಣ ಶಾಸಕ ದೇವಾನಂದ ಚವ್ಹಾಣ ಮಾತನಾಡಿ, ಜೆಡಿಎಸ್ - ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಂಜೂರಾಗಿದ್ದ ಕಾಮಗಾರಿಗಳಿಗೆ ಡಿಸಿಎಂ ಗೋವಿಂದ ಕಾರಜೋಳ ಭೂಮಿ ಪೂಜೆ ನೆರವೇರಿಸಿದ್ದಾರೆ ಎಂದು ಆರೋಪಿಸಿದರು. ಬಿಜೆಪಿ ಸರ್ಕಾರ ಬಂದ ಮೇಲೆ ನನ್ನ ಕ್ಷೇತ್ರಕ್ಕೆ ಒಂದು ನಯಾ ಪೈಸಾ ಅನುದಾನ ಬಂದಿಲ್ಲ ಎಂದೂ ದೂರಿದರು.