ಮುದ್ದೇಬಿಹಾಳ: ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಒಬ್ಬರಿಗೆ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಅವರನ್ನು ವಿಜಯಪುರದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸಂಪರ್ಕದಲ್ಲಿ ಬಂದಿರುವ ಕುಟುಂಬದವರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈಟಿವಿ ಭಾರತದೊಂದಿಗೆ ಮಾತನಾಡಿರುವ ತಾಲೂಕಾಡಳಿತ ವೈದ್ಯಾಧಿಕಾರಿ ಡಾ.ಸತೀಶ ತಿವಾರಿ, ಸರಕಾರಿ ಆಸ್ಪತ್ರೆಯನ್ನು ಸೀಲ್‌ಡೌನ್ ಮಾಡಲಾಗುವುದಿಲ್ಲ. ಅಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸಾರ್ವಜನಿಕರಿಗೆ ಆರೋಗ್ಯ ಸೇವೆ ನೀಡಲು ಮೇಲಾಧಿಕಾರಿಗಳು ನಿರ್ದೇಶನ ನೀಡಿದ್ದು, ಅದರಂತೆ ಸೋಮವಾರ ಇಡೀ ಆಸ್ಪತ್ರೆಗೆ ಹೈಪೋಕ್ಲೋರೈಡ್ ದ್ರಾವಣವನ್ನು ನೀರಿನಲ್ಲಿ ಮಿಶ್ರಣ ಮಾಡಿ ಸಿಂಪಡಣೆ ಮಾಡಲಾಗಿದೆ. ಕೊರೊನಾ ಸೋಂಕಿನ ಲಕ್ಷಣಗಳಿರುವ ಸಿಬ್ಬಂದಿಯ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದೆ. ವಿನಾಕಾರಣ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.