ವಿಜಯಪುರ: ತಳವಾರ ಮತ್ತು ಪರಿವಾರ ಸಮುದಾಯಗಳಿಗೆ ಪರಿಶಿಷ್ಟ ಪಂಗಡ ಪ್ರಮಾಣ ಪತ್ರ ನೀಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಜಿತೇಂದ್ರ ಕಾಂಬ್ಳೆ ಒತ್ತಾಯಿಸಿದರು.
ನಗರದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರ ಪರಿವಾರ ಮತ್ತು ತಳವಾರ ಸಮುದಾಯಗಳನ್ನು ಎಸ್‌ಟಿ ಸಮುದಾಯಕ್ಕೆ ಸೇರಿಸಿದೆ. ಆದರೆ, ಅವರಿಗೆ ಜಾತಿ ಪ್ರಮಾಣ ಪತ್ರ ನೀಡದೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಪ್ರಮಾಣ ಪತ್ರ ಸಿಗದಿರುವುದರಿಂದ ಈ ಸಮುದಾಯಗಳು ಸರ್ಕಾರಿ ಸೌಲಭ್ಯಗಳಿಂದ ವಂಚಿತವಾಗುವುದಲ್ಲದೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ತೊಂದರೆಯಾಗುತ್ತಿದೆ. ಹೀಗಾಗಿ ಸರ್ಕಾರ ತಕ್ಷಣ ಜಾತಿ ಪ್ರಮಾಣ ಪತ್ರ ನೀಡಬೇಕು ಎಂದು ಆಗ್ರಹಿಸಿದರು.
ಸಿಎಂ ಯಡಿಯೂರಪ್ಪನವರು ಉದ್ದೇಶಪೂರ್ವಕವಾಗಿ ಜಾತಿ ಪ್ರಮಾಣ ಪತ್ರ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಈ ಮೂಲಕ ಪರಿವಾರ ಹಾಗೂ ತಳವಾರ ಸಮುದಾಯಗಳನ್ನು ಅತಂತ್ರ ಸ್ಥಿತಿಯಲ್ಲಿರುವಂತೆ ಮಾಡುತ್ತಿದ್ದಾರೆ. ಜಾತಿ ಪ್ರಮಾಣ ಪತ್ರ ನೀಡದಿರಲು ಪರೋಕ್ಷವಾಗಿ ಆರೋಗ್ಯ ಸಚಿವ ಶ್ರೀರಾಮಲು ಕಾರಣ ಎನ್ನಲಾಗುತ್ತಿದೆ ಎಂದು ಅವರು ಆರೋಪಿಸಿದರು.
ತಕ್ಷಣವೇ ಸರ್ಕಾರ ಜಾತಿ ಪ್ರಮಾಣ ಪತ್ರ ನೀಡದೆ ಹೋದರೆ ದಲಿತ ಸಂಘಟನೆ ನೇತೃತ್ವದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಡಿಎಸ್‌ಎಸ್ ಮುಖಂಡ ಜಿತೇಂದ್ರ ಕಾಂಬ್ಳೆ ಸರ್ಕಾರಕ್ಕೆ ಎಚ್ಚರಿಸಿದರು.