ವಿಜಯಪುರ: ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಲಿದ್ದು, ಸುಸೂತ್ರವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ.
ಜಿಲ್ಲೆಯಲ್ಲಿ ಒಟ್ಟು 37,122 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕಳೆದ ವರ್ಷ 106 ಪರೀಕ್ಷಾ ಕೇಂದ್ರಗಳಿತ್ತು. ಈ ಬಾರಿ ಕೋವಿಡ್ ಹಿನ್ನೆಲೆ ಸಾಮಾಜಿಕ ಅಂತರ ಕಾಪಾಡುವ ಸಲುವಾಗಿ ಪರೀಕ್ಷಾ ಕೇಂದ್ರಗಳನ್ನು 121 ಕ್ಕೆ ಹೆಚ್ಚಿಸಲಾಗಿದೆ. ಕಂಟೈನ್ಮೆಂಟ್ ಪ್ರದೇಶದ 103 ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೇಂದ್ರ ಸ್ಥಾಪಿಸಲಾಗಿದೆ. ನೆಗೆಡಿ, ಜ್ವರ, ಶೀತ ಸೇರಿದಂತೆ ಅನಾರೋಗ್ಯವಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.
ಈಗಾಗಲೇ ನಗರ ಸೇರಿದಂತೆ ವಿವಿಧ ಗ್ರಾಮೀಣ ಭಾಗದ ಪರೀಕ್ಷಾ ಕೇಂದ್ರಗಳಲ್ಲಿ ಸೀಟ್ಗಳಿಗೆ ಹಾಲ್ ಟಿಕೆಟ್ ಸಂಖ್ಯೆ ಹಾಕಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಒಬ್ಬ ವಿದ್ಯಾರ್ಥಿಗೆ 3-4 ಮಾಸ್ಕ್ ವಿತರಿಸಲಾಗುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ ಈಗಾಗಲೇ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದ್ದು, ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಘೋಷಿಸಲಾಗಿದೆ.
ಉಚಿತ ಬಸ್ ವ್ಯವಸ್ಥೆ: ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕರೆ ತರಲು ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಒಟ್ಟು 147 ಕೆಎಸ್ಆರ್ಟಿಸಿ ಬಸ್ ಹಾಗೂ 141 ಖಾಸಗಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.
ಇನ್ನು ನಿನ್ನೆಯಷ್ಟೇ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಗೆ ಕೊರೊನಾ ಸೊಂಕು ತಗುಲಿರುವುದು ಪೋಷಕರು ಆತಂಕಗೊಳ್ಳುವಂತೆ ಮಾಡಿದ್ದು, ಹೀಗಾಗಿ ಜಿಲ್ಲಾಡಳಿತ ವಿದ್ಯಾರ್ಥಿಗಳ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿದೆ.
ಕಂಟೈನ್ಮೆಂಟ್ ಪ್ರದೇಶಗಳ 103 ವಿದ್ಯಾರ್ಥಿಗಳು ಈ ಪರೀಕ್ಷೆ ಬೇಡ ಮುಂದಿನ ಸಪ್ಲಿಮೆಂಟರಿ ಪರೀಕ್ಷೆ ಸಂದರ್ಭದಲ್ಲಿ ಬರೆಯುತ್ತೇವೆ ಎಂದು ಲಿಖಿತವಾಗಿ ಮನವಿ ಮಾಡಿದರೆ, ಅವರಿಗೆ ಮುಂದಿನ ಪರೀಕ್ಷೆಯಲ್ಲಿ ಪ್ರಥಮ ಆದ್ಯತೆ ನೀಡಲಾಗುತ್ತದೆ ಎಂದು ಜಿಲ್ಲಾಡಳಿತ ಹೇಳಿದೆ.