ವಿಜಯಪುರ : ಎಲ್ಲೆಡೆ ಹರಡುತ್ತಿರುವ ಕೋವಿಡ್-19 ತಡೆಗೆ ಅವಶ್ಯಕ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಕಂಟೇನ್ಮೆಂಟ್ ವಲಯಗಳಲ್ಲಿ ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ತಹಶೀಲ್ದಾರರು ಮತ್ತು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಡಿಸಿ ಸಭೆ ನಡೆಸಿದರು. ವೇಳೆ ಮಾತನಾಡಿದ ಡಿಸಿ, ಸಾಂಕ್ರಾಮಿಕವಾಗಿ ಹರಡುತ್ತಿರುವ ಕೋವಿಡ್-19 ತಡೆಗೆ ಅವಶ್ಯಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. 60 ವರ್ಷಕ್ಕಿಂತ ಮೇಲ್ಪಟ್ಟ ವಯೋವೃದ್ಧರು, 10 ವರ್ಷದೊಳಗಿನ ಮಕ್ಕಳು ಯಾವುದೇ ಪರಿಸ್ಥಿತಿಯಲ್ಲೂ ಹೊರಗೆ ಬರದಂತೆ ಮುನ್ನೆಚ್ಚರಿಕಾ ಕ್ರಮವಹಿಸಲು ಮನವಿ ಮಾಡಿದರು.
ಸಾರ್ವಜನಿಕರಿಗೆ ಯಾವುದೇ ರೀತಿಯ ಪ್ರಾಥಮಿಕ ಲಕ್ಷಣಗಳು ಕಂಡು ಬಂದ ತಕ್ಷಣ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ಯಾವುದೇ ಆಸ್ಪತ್ರೆಗಳಿಗೆ ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು. ಮಳೆಗಾಲ ಇರುವುದರಿಂದ ನೆಗಡಿ, ಕೆಮ್ಮು, ಜ್ವರ ಮತ್ತು ಉಸಿರಾಟ ತೊಂದರೆಗಳು ಕಂಡು ಬಂದಲ್ಲಿ ಆಸ್ಪತ್ರೆಗೆ ದಾಖಲಾಗಬೇಕು. ತೀವ್ರ ಉಸಿರಾಟ ತೊಂದರೆ ಆಗುವವರೆಗೆ ವಿಳಂಬ ಮಾಡದೇ ತಕ್ಷಣ ಸಮೀಪದ ಆಸ್ಪತ್ರೆಗಳಿಗೆ ಸಂಪರ್ಕಿಸುವಂತೆ ತಿಳಿಸಿದರು.
ಅತಿ ಹೆಚ್ಚು ಜನಸಂದಣಿ, ಕೊಳಗೇರಿ ಪ್ರದೇಶಗಳಲ್ಲಿ ಸಾರ್ವಜನಿಕರೆಲ್ಲರೂ ಎಚ್ಚರಿಕೆಯಿಂದ ಇದ್ದು, ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿಕೊಳ್ಳಬೇಕು. ಜಿಲ್ಲಾದ್ಯಂತ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಳ್ಳುವಂತೆ ತಿಳಿಸಿರುವ ಅವರು, ತೀರಾ ಅವಶ್ಯಕ ಕಾರ್ಯಗಳಿದ್ದಾಗ ಮಾತ್ರ ಮನೆಯಿಂದ ಹೊರ ಬರುವಂತೆ ಮತ್ತು ಎಚ್ಚರಿಕೆ ವಹಿಸುವಂತೆ ತಿಳಿಸಿದರು.
ಜಿಲ್ಲೆಯಾದ್ಯಂತ ಈವರೆಗೆ ಒಟ್ಟು 85 ಕಂಟೇನ್ಮೆಂಟ್ ವಲಯಗಳನ್ನು ಗೊತ್ತು ಪಡಿಸಲಾಗಿದೆ. ಸದ್ಯ ಚಾಲ್ತಿಯಲ್ಲಿ 40 ಕಂಟೇನ್ಮೆಂಟ್ ಝೋನ್‍ಗಳಿವೆ. ಈವರೆಗೆ ಒಟ್ಟು 45 ಕಂಟೇನ್ಮೆಂಟ್ ವಲಯಗಳನ್ನು ಡಿನೋಟಿಫಿಕೇಶನ್ ಮಾಡಲಾಗಿದೆ.
ಹೊರರಾಜ್ಯದಿಂದ ಬರುವವರು ಕ್ವಾರಂಟೈನ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕೊರೊನಾ ತಡೆಗೆ ಸ್ವಯಂ ಪ್ರೇರಿತರಾಗಿ ಸರ್ಕಾರದ ನಿಯಮಗಳನ್ನು ಪಾಲಿಸಬೇಕೆಂದು ಜಿಲ್ಲೆಯ ಜನರಿಗೆ ಡಿಸಿ ಮನವಿ ಮಾಡಿದರು.