ವಿಜಯಪುರ: ರೈತ ಮತ್ತು ಕಾರ್ಮಿಕ ವಿರೋಧಿ ಎಪಿಎಂಸಿ ಹಾಗೂ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಿಂಪಡೆಯುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು.
ರೈತರು ಹಾಗೂ ಕಾರ್ಮಿಕರು ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರವಾಹಕ್ಕೆ ರೈತರ ಬೆಳೆಗಳು ತುತ್ತಾಗಿವೆ. ಇದುವರೆಗೂ ಪರಿಹಾರ ನೀಡುವ ಕಾರ್ಯಕ್ಕೆ ಸರ್ಕಾರ ಮುಂದಾಗಿಲ್ಲ, ಇತ್ತ ಅದೆಷ್ಟೋ ಕಾರ್ಮಿಕರು ಉದ್ಯೋಗ ಕಳೆದುಕೊಂಡು ಜೀವನ ನಡೆಸಲು ಕಷ್ಟಪಡುವಂತಾಗಿದೆ. ಆದ್ರೆ ಬಿಜೆಪಿ ಸರ್ಕಾರಗಳು ಎಪಿಎಂಸಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ, ವಿದ್ಯುತ್ ಕಾಯ್ದೆ, ಕಾರ್ಮಿಕ ಕಾಯ್ದೆ ಮೂಲಕ ದೇಶದ ಜನರನ್ನು ತುಳಿದು ಕಾರ್ಪೋರೇಟ್ ಕಂಪನಿಗಳನ್ನು ಬೆಳಸುವ ಕಾರ್ಯಕ್ಕೆ ಮುಂದಾಗುತ್ತಿದೆ ಎಂದು ಕೈ ಪಕ್ಷದ ಕಾರ್ಯಕರ್ತರು ಕಿಡಿ ಕಾರಿದರು.
ಇನ್ನು ಸರ್ಕಾರ ಜನ ವಿರೋಧಿ ನೀತಿ ಜಾರಿ ಕೈ ಬಿಟ್ಟು ಜನ ಪರವಾದ ಯೋಜನೆ ಜಾರಿ ಮಾಡಬೇಕು. ಕೊರೊನಾದಿಂದ ಉದ್ಯೋಗ ಕಳೆದುಕೊಂಡ ಕಾರ್ಮಿಕರ ನೆರವಿಗೆ ಸರ್ಕಾರ ಧಾವಿಸಬೇಕು. ಕೂಡಲೇ ರೈತ ಮತ್ತು ಕಾರ್ಮಿಕ ವಿರೋಧಿ ನೀತಿ ವಾಪಸ್ ಪಡೆಯುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.