ವಿಜಯಪುರ: ಸರ್ಕಾರಿ ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರಿತವಾಗಿ ದುಡಿಯುತ್ತಿರುವ ಸಿಬ್ಬಂದಿಯನ್ನು ಕಾಯಂಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕಕರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಡಿಹೆಚ್‌ಓ ಕಚೇರಿ ಮುಂಭಾಗದಲ್ಲಿ ಗುತ್ತಿಗೆ ಹಾಗೂ ಹೊರ ಗುತ್ತಿಗೆ ಆಧಾರಿತವಾಗಿ ಜಿಲ್ಲೆಯಲ್ಲಿ 200ಕ್ಕೂ ಅಧಿಕ ಮಂದಿ ನರ್ಸ್, ಡಿ ದರ್ಜೆ, ಟೆಕ್ನಿಕಲ್ ಸೇರಿದಂತೆ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಸರ್ಕಾರ ಮಾತ್ರ ಗುತ್ತಿಗೆ ನೌಕರರಿಗೆ ಸಮಾನ ವೇತನ ಹಾಗೂ ಕಾಯಂ ನೌಕರಿ ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆಗೆ ಮುಂದಾಗುತ್ತಿಲ್ಲ. ಇತ್ತ ಕೊರೊನಾ ವೈರಸ್ ಆರಂಭದ ದಿನಗಳಿಂದ ಫ್ರಂಟ್ ಲೈನ್ ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇದುವರೆಗೂ ಯಾವುದೇ ಆರೋಗ್ಯ ರಕ್ಷಣಾ ಕಿಟ್ ನೀಡಿಲ್ಲ ಎಂದು ಪ್ರತಿಭಟನಾಕಾರು ದೂರಿದರು.
ಇನ್ನು ಕಳೆದ ಹಲವು ದಿನಗಳಿಂದ ಸಮಾನ ವೇತನಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ಆದರೆ ಸರ್ಕಾರ ಮಾತ್ರ ಬೇಡಿಕೆ ಈಡೇರಿಕೆ ಕಾರ್ಯಕ್ಕೆ ಮುಂದಾಗುತ್ತಿಲ್ಲ. ಆರೋಗ್ಯ ಇಲಾಖೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರರು ಕಡಿಮೆ ಸಂಬಳದಿಂದ ಕುಟುಂಬ ನಿರ್ವಹಣೆ ಮಾಡಲಾಗದ ಪರಿಸ್ಥಿತಿ ಎದುರಿಸುವಂತಾಗಿದೆ. ಸರ್ಕಾರ ತಕ್ಷಣ ನೆರವಿಗೆ ಬರುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ಸಂಘದ ಕಾರ್ಯಕರ್ತರು ಪ್ರತಿಭಟಿಸಿದರು.