ವಿಜಯಪುರ: ಪ್ರವಾಹದಿಂದ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ಹಾಗೂ ವಾಣಿಜ್ಯ ಮಳಿಗೆಗಳಿಗೆ ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಡಿಸಿಗೆ ಮನವಿ ಸಲ್ಲಿಸಿದ್ದಾರೆ.
ಕಳೆದ ವಾರ ಸುರಿದ ಭಾರಿ ಮಳೆಗೆ ಜಿಲ್ಲೆಯ ಭೀಮಾ ಹಾಗೂ ಡೋಣಿ ನದಿಗಳ ಪ್ರವಾಹದಿಂದ ರೈತರ ಜಮೀನುಗಳಿಗೆ ಹಾಗೂ ಮನೆಗಳಿಗೆ ನೀರು ನುಗ್ಗಿ ಹಾನಿಯುಂಟಾಗಿತ್ತು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಪ್ರವಾಹದಲ್ಲಿ ಸಿಲುಕಿದ್ದ ರೈತರಿಗೆ ನ್ಯಾಯ ಒದಗಿಸುವ ಕಾರ್ಯಕ್ಕೆ ಮುಂದಾಗಬೇಕು. ಆಸ್ತಿ - ಪಾಸ್ತಿ ಹಾನಿಗೆ ಸಂಬಂಧಿಸಿದಂತೆ ನ್ಯಾಯಯುತ ಪರಿಹಾರ ಒದಗಿಸುವಂತೆ ಕರವೇ ಕಾರ್ಯಕರ್ತರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಇನ್ನು ವಿಜಯಪುರ ನಗರದಲ್ಲಿ ಅನೇಕ ವಾಣಿಜ್ಯ ಮಳಿಗೆಗಳಿಗೆ ಆಂಗ್ಲ ಭಾಷೆಯಲ್ಲಿ ನಾಮಫಲಕ ಹಾಕಲಾಗಿದ್ದು, ಗ್ರಾಮೀಣ ಪ್ರದೇಶದ ಕೃಷಿಕರು ವ್ಯವಹಾರಕ್ಕೆ ಕಷ್ಟವಾಗಿದೆ. ಎಲ್ಲ ವಾಣಿಜ್ಯ ಮಳಿಗೆಯ ವ್ಯಾಪಾರಸ್ಥರಿಗೆ ಕಡ್ಡಾಯವಾಗಿ ಅಂಗಡಿ ಮುಂಗಟ್ಟುಗಳಿಗೆ ಕನ್ನಡದಲ್ಲಿ ನಾಮಫಲಕ ಅಳವಡಿಸುವಂತೆ, ಜಿಲ್ಲಾಡಳಿತದಿಂದ ಜಾಥಾ ಹಮ್ಮಿಕೊಳ್ಳುವಂತೆ ಆಗ್ರಹಿಸಿ ಕರವೇ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.