ಮುದ್ದೇಬಿಹಾಳ: ಮತಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗಾಗಿ 500 ಕೋಟಿ ರೂ. ಅನುದಾನಕ್ಕೆ ಮುಖ್ಯಮಂತ್ರಿಗಳ ಬಳಿ ಪ್ರಸ್ತಾವನೆ ಸಲ್ಲಿಸಿರುವುದಾಗಿ ಆಹಾರ ನಿಗಮದ ಅಧ್ಯಕ್ಷ, ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ತಿಳಿಸಿದರು.
ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ತಾಲೂಕಾಡಳಿತದಿಂದ ಹಮ್ಮಿಕೊಂಡಿದ್ದ 72ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಳಿಕ ಪಟ್ಟಣದ ಓಂಶಾಂತಿ ಭವನದ ಮುಂದೆ ಇರುವ ಅಂಬೇಡ್ಕರ್ ವೃತ್ತದಲ್ಲಿ ನವೀಕರಣಗೊಂಡ ಅಂಬೇಡ್ಕರ್ ಪ್ರತಿಮೆಗೆ ಹೂ ಮಾಲೆ ಹಾಕಿ ಗೌರವ ಅರ್ಪಿಸಿದರು.
ಕೊರೊನಾ ಹೊಡೆತಕ್ಕೆ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿದ್ದರೂ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಒಂದೂವರೆ ವರ್ಷದಲ್ಲಿ 500 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. 2021ನೇ ಸಾಲಿನಲ್ಲಿ ಮತ್ತೆ 500 ಕೋಟಿ ರೂ.ಗಳ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಿರುವುದಾಗಿ ತಿಳಿಸಿದರು.
ದೇಶ ಅಖಂಡವಾಗಿ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ನಮ್ಮ ದೇಶದ ಲಸಿಕೆಯನ್ನು ಬೇರೆ ರಾಷ್ಟ್ರಗಳು ಆಮದು ಮಾಡಿಕೊಳ್ಳುವಂತಾಗಿದೆ ಎಂದರು.
ರೈತ ಹೋರಾಟ ಬೆಂಬಲಿಸಿ ವಿನೂತನ ಪ್ರತಿಭಟನೆ:
ಕೃಷಿ ಕಾಯ್ದೆ ಕೈ ಬಿಡಬೇಕೆಂದು ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಟ್ರ್ಯಾಕ್ಟರ್ ಜಾಥಾ ಹಿನ್ನೆಲೆಯಲ್ಲಿ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯಿಂದ ಜೋಡೆತ್ತು ಮೂಲಕ ಉಳುಮೆ ಮಾಡಿ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.
ಆರಂಭದಲ್ಲಿ ಹೋರಾಟದಲ್ಲಿ ಮಡಿದ ರೈತರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ನಂತರ ಜೋಡೆತ್ತುಗಳ ಮೂಲಕ ಉಳುಮೆ ಮಾಡಿ, ಬಾರಕೋಲು ಬೀಸುವ ಮೂಲಕ ರೈತರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು. ತಕ್ಷಣ ಕೃಷಿ ಕಾಯ್ದೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು.