ವಿಜಯಪುರ: 'ಹಿಂದ' ಸಮಾವೇಶ ಮಾಡುವ ಮೂಲಕ ಮತ್ತೊಮ್ಮೆ ತಾನು ಮುಖ್ಯಮಂತ್ರಿಯಾಗುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹಗಲುಗನಸು ಕಾಣುತ್ತಿದ್ದಾರೆ. ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮತ್ತೊಮ್ಮೆ ಬರುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗದವರನ್ನು ಹಾಗೂ ದಲಿತರನ್ನು ಉದ್ಧಾರ ಮಾಡುತ್ತೇನೆ ಎಂದು ನಂಬಿಸಿ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅಧಿಕಾರ ಅನುಭವಿಸಿದ್ದಾರೆ. ಈಗ ಜನರಿಗೂ ಗೊತ್ತಾಗಿದೆ, ನಮ್ಮನ್ನು ಬಳಸಿಕೊಂಡು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರ ಅನುಭವಿಸಿದೆ ಎಂದು ಕಾಂಗ್ರೆಸ್ ಪಕ್ಷವನ್ನು ಜನ ಸೋಲಿಸಿದರು. ಸಿದ್ದರಾಮಯ್ಯ ಅವರನ್ನು ಚಾಮುಂಡೇಶ್ವರಿಯಲ್ಲಿ ಸೋಲಿಸಿದ್ದಾರೆ. ಅದರೂ ಸಿದ್ದರಾಮಯ್ಯಗೆ ಬುದ್ದಿ ಬಂದಿಲ್ಲ ಎಂದು ವ್ಯಂಗ್ಯವಾಡಿದರು.
ನಾನು ಮುಂದಿನ ಸಿಎಂ ಎಂದು ಸಿದ್ದರಾಮಯ್ಯ ಸ್ವಯಂ ಘೋಷಣೆ ಮಾಡಿಕೊಳ್ಳುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬಹಿರಂಗವಾಗಿ ಹೀಗೆ ಹೇಳಿಕೆ ನೀಡುವುದು ಸರಿಯಲ್ಲ ಎಂದು ಹೇಳುತ್ತಿದ್ದರೂ ಸಿದ್ದರಾಮಯ್ಯ ಲೆಕ್ಕಿಸುತ್ತಿಲ್ಲ. ಅವರ ಅನುಮತಿ ಸಹ ಪಡೆಯದೇ ಸಿಎಂ ನಾನೇ ಎಂದು ಹೇಳಿಕೆ ನೀಡುತ್ತಿದ್ದಾರೆ ಎಂದರು.
ಯತ್ನಾಳ್ ಹಿಂದುತ್ವವಾದಿ:
ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನಿಜವಾದ ಹಿಂದುತ್ವವಾದಿ ಯಾಗಿದ್ದಾರೆ. ಆದರೆ, ಪಕ್ಷದ ಕುರಿತು ನಾಲ್ಕು ಗೋಡೆಗಳ ಮಧ್ಯೆ ಮಾತನಾಡುವ ವಿಷಯವನ್ನು ಬಹಿರಂಗವಾಗಿ ಹೇಳಿಕೆ ನೀಡಿ ತಪ್ಪು ಮಾಡುತ್ತಿದ್ದಾರೆ. ಸಿಎಂ ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ ವಿರುದ್ಧ ಕಂಡ ಕಂಡಲ್ಲಿ ಬಹಿರಂಗ ಹೇಳಿಕೆ ನೀಡುತ್ತಿರುವುದು ಅವರ ವರ್ಚಸ್ಸಿಗೆ ಧಕ್ಕೆ ಉಂಟಾಗುತ್ತಿದೆ. ಪಕ್ಷದ ಸಮಸ್ಯೆಗಳನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕು. ನೀವು ಬಹಿರಂಗವಾಗಿ ಹೇಳಿಕೆ ನೀಡಬೇಡಿ ಎಂದು ಮನವಿ ಮಾಡಿದರು.