ವಿಜಯಪುರ: ಸಣ್ಣ ನೀರಾವರಿ ಹಾಗೂ ನೀರಿನಾಸರೆಗಳ ಗಣತಿ ಕಾರ್ಯವನ್ನು ಅಚ್ಚುಕಟ್ಟಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 6ನೇ ಸಣ್ಣ ನೀರಾವರಿ ಗಣತಿ ಮತ್ತು ನೀರಿನಾಸರೆಗಳ ಗಣತಿ ಕಾರ್ಯ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ಭಾರತ ಸರ್ಕಾರದ ಜಲ ಸಂಪನ್ಮೂಲ ಇಲಾಖೆಯ ಶೇ. 100ರಷ್ಟು ಕೇಂದ್ರ ಸುರಕ್ಷಿತ ಸಣ್ಣ ನೀರಾವರಿ ಅಂಕಿ-ಅಂಶಗಳ ಸಮನ್ವಯೀಕರಣ ಯೋಜನೆ ಅಡಿಯಲ್ಲಿ ಪ್ರತಿ ಐದು ವರ್ಷಕ್ಕೊಮ್ಮೆ ಸಣ್ಣ ನೀರಾವರಿ ಗಣತಿಯನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿರುವ ಎಲ್ಲಾ ಸಣ್ಣ ನೀರಾವರಿ ಹಾಗೂ ನೀರಿನಾಸರೆಗಳ ಗಣತಿಯನ್ನು ಸಮರ್ಪಕವಾಗಿ ಕೈಗೊಳ್ಳಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಕಂದಾಯ ಇಲಾಖೆ, ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ, ಭಾರಿ ಮತ್ತು ಮಧ್ಯಮ ನೀರಾವರಿ ಇಲಾಖೆ, ಕೃಷಿ, ತೋಟಗಾರಿಕೆ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ಪುರಸಭೆ, ನಗರಸಭೆಗಳು ರಾಜ್ಯದ ಹಿತದೃಷ್ಟಿಯಿಂದ ಈ ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಗಣತಿ ಕ್ಷೇತ್ರ ಕಾರ್ಯವನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹೇಳಿದರು.