ವಿಜಯಪುರ: ಲಾಕ್ ಡೌನ್ ಸಡಿಲಿಕೆಯಿಂದ ಸದ್ಯ ರಾಜ್ಯದ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ ನೀಡಲಾಗಿತ್ತು. ಶೀಘ್ರವೇ ವಿವಿಧ ಪೂಜಾ ಸೇವೆ ಕೈಗೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಅವರು, ದೇವಸ್ಥಾನಗಳನ್ನು ತೆರೆಯಲು ಅನುಮತಿ ನೀಡಿದ ಮೇಲೆ ಹೆಚ್ಚಿನ ಭಕ್ತರಿಂದ ದೇವರಿಗೆ ವಿಶೇಷ ಪೂಜೆ ಸಲ್ಲಿಸಲು ಅವಕಾಶ ಮಾಡಿಕೊಡಬೇಕು ಎನ್ನುವ ಬೇಡಿಕೆ ಇದೆ. ಹಾಗಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಆಧಾರದ ಮೇಲೆ ಪೂಜೆಗೆ ಅವಕಾಶ ಮಾಡಿಕೊಡಲು ಪ್ರಯತ್ನಿಸಲಾಗುವದು. ಶೀಘ್ರವೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜೊತೆ ದೇವಸ್ಥಾನದಲ್ಲಿ ಪೂಜೆ, ಕುಂಕುಮಾರ್ಚನೆ ಮಾಡುವ ಕುರಿತು ಚರ್ಚೆ ನಡೆಸಲಾಗುವದು. ಅವರು ಕೂಡ ಅನುಮತಿ ನೀಡುವ ವಿಶ್ವಾಸವಿದೆ ಎಂದರು.
ಇನ್ನು ರಾಜ್ಯದಲ್ಲಿ ಒಟ್ಟು 35 ಸಾವಿರ ದೇವಸ್ಥಾನಗಳಿವೆ. ಅದರಲ್ಲಿ ವಿಜಯಪುರ ಜಿಲ್ಲೆಯಲ್ಲಿ 552 ದೇವಸ್ಥಾನಗಳಿವೆ. ಲಾಕ್ ಡೌನ್ ಸಮಯದಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಅರ್ಚಕರಿಗೆ ಸರ್ಕಾರ ಎಲ್ಲ ರೀತಿಯಲ್ಲಿ ನೆರವಿಗೆ ಬಂದಿದೆ ಎಂದರು.