ಮುದ್ದೇಬಿಹಾಳ: ಮುಂಬರುವ ಬಜೆಟ್‌ನಲ್ಲಿ ಆಲಮಟ್ಟಿ ಆಣೆಕಟ್ಟಿನ ಎತ್ತರವನ್ನು ಹೆಚ್ಚಳ ಮಾಡುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ಮುದ್ದೇಬಿಹಾಳ ಪಟ್ಟಣದಲ್ಲಿರುವ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರ ನಿವಾಸಕ್ಕೆ ಅನೌಪಚಾರಿಕವಾಗಿ ಭೇಟಿ ನೀಡಿದ ವೇಳೆ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಆಲಮಟ್ಟಿ ಅಣೆಕಟ್ಟಿನ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೆರೆಗಳನ್ನು ತುಂಬಿಸಲು ವಿಶೇಷ ಅನುದಾನ ಮೀಸಲಿಟ್ಟು ಹಂತ ಹಂತವಾಗಿ ತುಂಬಿಸಲು ಕ್ರಮ ಕೈಗೊಳ್ಳಲಾಗುವುದು. ಕಾಲುವೆಗಳ ದುರಸ್ತಿಯ ಕುರಿತು ಕೆಬಿಜೆಎನ್ನೆಲ್ ಹಿರಿಯ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಮುಂದಿನ ಕ್ರಮ ಜರುಗಿಸುತ್ತೇವೆ. ಕಳೆದ ವರ್ಷ ಪ್ರವಾಹ ಸಂದರ್ಭದಲ್ಲಿ ಮುಳುಗಡೆ ಭೀತಿಯಲ್ಲಿರುವ ಗ್ರಾಮಗಳ ಸಂಪೂರ್ಣ ಸ್ಥಳಾಂತರಕ್ಕೆ ಮುಖ್ಯಮಂತ್ರಿಗಳು ಒಲವು ವ್ಯಕ್ತಪಡಿಸಿದ್ದಾರೆ. ಚರ್ಚೆ ನಡೆಸಿ ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು. ಇದೇ ವೇಳೆ ಶಾಸಕ ನಡಹಳ್ಳಿ ಕೈಗೊಳ್ಳುತ್ತಿರುವ ಸಾಮಾಜಿಕ ಸೇವೆಯ ಬಗ್ಗೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.