ವಿಜಯಪುರ: ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಉತ್ತರಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ವೀಕ್ಷಣೆ ಮಾಡಿದ್ದೇನೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ವೈಮಾನಿಕ ಸಮೀಕ್ಷೆ ನಡೆಸಿದ ನಂತರ ವಿಜಯಪುರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸಮಸ್ಯೆಗಳಿಗೆ ಶೀಘ್ರದಲ್ಲಿ ಪರಿಹಾರ ಕೊಡುವಂತೆ ಸೂಚಿಸಿದ್ದೇನೆ. ಮುಂದಿನ 15 ದಿನಗಳ ಒಳಗೆ ಪ್ರವಾಹ ಪೀಡಿತ ಜಿಲ್ಲೆಗಳ ಶಾಸಕರ ಸಭೆ ಕರೆದು ಚರ್ಚಿಸುತ್ತೇನೆ ಎಂದು ಮಾಹಿತಿ ನೀಡಿದ್ರು.
ಇಂದು ದೆಹಲಿಗೆ ತೆರಳಿ ಕೇಂದ್ರದ ನಾಯಕರೊಂದಿಗೆ ರಾಜ್ಯದಲ್ಲಿ ಉಂಟಾಗಿರುವ ನೆರೆ ಪ್ರವಾಹದ ಬಗ್ಗೆ ಚರ್ಚೆ ನಡೆಸುತ್ತೇನೆ. ಮಹಾರಾಷ್ಟ್ರದಿಂದ ಕೃಷ್ಣ ನದಿಗೆ ಹರಿದು ಬರುತ್ತಿರುವ ನೀರನ್ನು ತೆಲಂಗಾಣದತ್ತ ಹರಿಸುವ ಕುರಿತು ಉಭಯ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆದಿದ್ದೇನೆ. ಅವರೊಂದಿಗೆ ಮುಂದಿನ ಕ್ರಮಗಳ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಇನ್ನು ಪ್ರವಾಹಪೀಡಿತ ಹಾಗೂ ಪ್ರಕೃತಿ ವಿಕೋಪ ನಿಧಿಯಲ್ಲಿ ಯಾವುದೇ ಹಣದ ಕೊರತೆ ಇಲ್ಲ. ನೆರೆ ಸೇರಿದಂತೆ ಎಲ್ಲವನ್ನೂ ಕೂಡ ಶೀಘ್ರದಲ್ಲೇ ಬಗೆಹರಿಸಲಾಗುವುದು. ಈಗಾಗಲೇ ಪ್ರತಿ ಜಿಲ್ಲಾಧಿಕಾರಿಗಳ ಬಳಿ 5 ಕೋಟಿಗಳಿಗಿಂತ ಹೆಚ್ಚು ಹಣ ಇದೆ. ಹೆಚ್ಚುವರಿ ಹಣ ಅಗತ್ಯ ಬಿದ್ದರೆ ನೀಡಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ, ಇದು ಬಹಳ ಹಿಂದೆ ರದ್ದಾಗಬೇಕಿತ್ತು. ಈಗ ಕೆಂದ್ರ ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದು ಹೇಳಿದರು.