ವಿಜಯಪುರ: ರಾಜೀನಾಮೆಯಿಂದ ತೆರವಾಗಿದ್ದ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಕಚೇರಿ ಸುತ್ತಮುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಜಿಲ್ಲಾ ಪಂಚಾಯಿತಿಗೆ ಒಟ್ಟು 42 ಸದಸ್ಯರಿದ್ದಾರೆ. ಬಿಜೆಪಿ-20, ಕಾಂಗ್ರೆಸ್-18, ಜೆಡಿಎಸ್ 3 ಹಾಗೂ ಓರ್ವ ಪಕ್ಷೇತರ ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನದ ಚುಕ್ಕಾಣಿ ಹಿಡಿಯಲು 22 ಸದಸ್ಯರ ಬೆಂಬಲ ಬೇಕಾಗಿದೆ. ಇಲ್ಲಿಯವರೆಗೆ ಜೆಡಿಎಸ್ ಜೊತೆ ಸೇರಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಇದಕ್ಜೆ ಕೆಲ ಬಿಜೆಪಿ ಸದಸ್ಯರು ಕೈ ಜೋಡಿಸಿದ್ದರು. ಆದರೆ, ಬಿಜೆಪಿಯಲ್ಲಿನ ಭಿನ್ನಮತ ಬದಿಗೊತ್ತಿ ಈ ಬಾರಿ ಸಂಖ್ಯಾ ಬಲದ ಆಧಾರದ ಮೇಲೆ ಬೇರೆ ಪಕ್ಷದ ಬೆಂಬಲ ಪಡೆದು ಅಧ್ಯಕ್ಷ ಸ್ಥಾನ ಅಲಂಕರಿಸಲು ಬಿಜೆಪಿ ಮುಖಂಡರು ಹರಸಾಹಸ ಪಡುತ್ತಿದ್ದಾರೆ. ಇತ್ತ ಕಾಂಗ್ರೆಸ್ ಸಹ ಸಾರವಾಡ ಕ್ಷೇತ್ರದ ಸದಸ್ಯೆ ಸುಜಾತಾ ಕಳ್ಳಿಮನಿಯವರನ್ನು ಏಕ ಮಾತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಲು ಸಿದ್ದತೆ ಮಾಡಿಕೊಂಡಿದೆ. ಎರಡು ರಾಷ್ಟ್ರೀಯ ಪಕ್ಷಗಳಿಗೆ ಕಿಂಗ್ ಮೇಕರ್ ಆಗಿ ಪ್ರಾದೇಶಿಕ ಪಕ್ಷ ಜೆಡಿಎಸ್ ಒಲವು ಅತ್ಯವಶ್ಯವಾಗಿದೆ. ಬಿಜೆಪಿ ಕಣದಿಂದ ಹಿಂದೆ ಸರಿದರೆ ಕಾಂಗ್ರೆಸ್ ಅಭ್ಯರ್ಥಿ ಅವಿರೋಧ ಆಯ್ಕೆಯಾದರೂ ಅಚ್ಚರಿ ಪಡುವ ಹಾಗಿಲ್ಲ.
ಪೊಲೀಸ್ ಭದ್ರತೆ: ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜನೆಗೆ ಜಿಲ್ಲಾಡಳಿತ ಸಿದ್ದತೆ ಮಾಡಿಕೊಂಡಿದೆ. ಈಗಾಗಲೇ ಬೆಳಗ್ಗೆ 6 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ಜಿಲ್ಲಾ ಪಂಚಾಯಿತಿ ಆವರಣದಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಹೊರಡಿಸಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಆದೇಶ ಹೊರಡಿಸಿದ್ದಾರೆ.