ವಿಜಯಪುರ: ಕೋವಿಡ್-19 ನಿಯಂತ್ರಣದಲ್ಲಿ ಯಾವುದೇ ಫಲಾಪೇಕ್ಷೆ ಇಲ್ಲದೆ ಸೇವೆ ಸಲ್ಲಿಸುತ್ತಿರುವ ಮಾಧ್ಯಮ ಪ್ರತಿನಿಧಿಗಳ ಕಾರ್ಯ ಅನನ್ಯ ಮತ್ತು ಪ್ರಶಂಸಾರ್ಹವಾಗಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ನಗರದಲ್ಲಿ ಇಂದು 'ಜಿಲ್ಲಾಕೇಂದ್ರದ ಮಾಧ್ಯಮ ಪ್ರತಿನಿಧಿಗಳಿ'ಗಾಗಿ ಜಿಲ್ಲಾ ಆಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಕೋವಿಡ್-19 ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಳೆದ ಒಂದೂವರೆ ವರ್ಷಗಳಿಂದ ಕೋವಿಡ್-19 ನಿಯಂತ್ರಣದಲ್ಲಿ ಮಾಧ್ಯಮ ಪ್ರತಿನಿಧಿಗಳು ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ. ಯಾವುದೇ ಫಲಾಪೇಕ್ಷೆ ಇಲ್ಲದೆ, ನಿಸ್ವಾರ್ಥ ಸೇವೆಯನ್ನು ಸಲ್ಲಿಸಿದ್ದು ಇದಕ್ಕಾಗಿ ಸರ್ಕಾರ ಮಾಧ್ಯಮ ಪ್ರತಿನಿಧಿಗಳಿಗೆ ಫ್ರಂಟ್ಲೈನ್ ವಾರಿಯರ್ಸ್ಗಳಾಗಿ ಘೋಷಿಸಿದೆ. ಇದಕ್ಕಾಗಿ ಇಂದು ಕೋವಿಡ್-19 ಲಸಿಕೆಯನ್ನು ಪ್ರತ್ಯೇಕವಾಗಿ ವಿಶೇಷ ರೀತಿಯಲ್ಲಿ ನೀಡಲಾಗುತ್ತಿದೆ ಎಂದು ಹೇಳಿದರು.
ಕೋವಿಡ್-19 ಲಸಿಕೆ ನೀಡುವುದರಿಂದ ಅಡ್ಡಪರಿಣಾಮ ಆಗುತ್ತದೆ ಎಂಬ ಭಯ ಸಾರ್ವಜನಿಕರಲ್ಲಿದ್ದು ,ಈ ಭಯವನ್ನು ಹೋಗಲಾಡಿಸಲು ಮತ್ತು ಈ ಲಸಿಕೆಯಿಂದ ಯಾವುದೇ ಸಮಸ್ಯೆ ಇಲ್ಲ ಎಂಬುವುದನ್ನು ತಿಳಿಹೇಳುವ ದಿಸೆಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಲಸಿಕಾ ಕಾರ್ಯಕ್ರಮ ಆಯೋಜಿಸಿ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಹೇಳಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿ ನಿನ್ನೆ ನಿಧನರಾದ ಚಂದ್ರಕಲಾ ಜೋಶಿ ಅವರ ಆತ್ಮಕ್ಕೆ ಶಾಂತಿ ಕೋರಿ ಎರಡು ನಿಮಿಷ ಮೌನ ಆಚರಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಲಸಿಕಾ ಕಾರ್ಯಕ್ರಮದ ಸಂದರ್ಭದಲ್ಲಿ ಒಟ್ಟು 45ಕ್ಕೂ ಹೆಚ್ಚು ಮಾಧ್ಯಮ ಪ್ರತಿನಿಧಿಗಳಿಗೆ ಪ್ರಥಮ ಹಂತದ ಲಸಿಕೆ ನೀಡಲಾಯಿತು.
ಇನ್ನು ಇದೇ ವೇಳೆ ಸರ್ಕಾರಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಗೆ ಭೇಟಿ ನೀಡಿದ ಶಶಿಕಲಾ ಅವರು, ಈ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸುವ ಉದ್ದೇಶ ಹೊಂದಲಾಗಿದ್ದು ಮುಂದಿನ ದಿನಗಳಲ್ಲಿ ಈ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುತ್ತೇವೆ ಎಂದರು.
100 ಹಾಸಿಗೆಗಳ ಆಸ್ಪತ್ರೆ ಇದಾಗಿದ್ದು ಹೆಚ್ಚುವರಿ ಬೆಡ್ಗಳ ವ್ಯವಸ್ಥೆಯೂ ಸಹ ಇದ್ದು ಮೂಲ ಸೌಕರ್ಯ ಸೇರಿದಂತೆ ಮಾನವ ಸಂಪನ್ಮೂಲ ಬಳಕೆಯ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.