ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಜಲಾಶಯಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆ. 25ರಂದು ಭೇಟಿ ನೀಡಲಿರುವ ಹಿನ್ನೆಲೆ, ಇಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಕೆಬಿಜೆಎನ್ ಎಲ್ ಮುಖ್ಯ ಅಭಿಯಂತರ ಪಿ.ಆರ್. ಕುಲಕರ್ಣಿ ಹಾಗೂ ಇತರೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.
ಆ. 25ರಂದು ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಹೆಲಿಕ್ಯಾಫ್ಟರ್ ಮೂಲಕ ಆಲಮಟ್ಟಿಗೆ ಮಧ್ಯಾಹ್ನ 12ಕ್ಕೆ ಆಗಮಿಸಲಿದ್ದಾರೆ. ಮುಖ್ಯಮಂತ್ರಿಗಳ ಜೊತೆ ಕಂದಾಯ ಸಚಿವ ಆರ್. ಅಶೋಕ್ ಆಗಮಿಸಲಿದ್ದು, ಆಲಮಟ್ಟಿ ಜಲಾಶಯ ವೀಕ್ಷಣೆ ಮಾಡಲಿದ್ದಾರೆ.
ಮಧ್ಯಾಹ್ನ ಆಲಮಟ್ಟಿ ಅತಿಥಿ ಗೃಹದಲ್ಲಿ ಗದಗ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವರು, ಡಿಸಿ, ಎಸ್ ಪಿ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಪ್ರವಾಹ ಪರಿಸ್ಥಿತಿ ಕುರಿತು ಸಭೆ ನಡೆಸಲಿದ್ದಾರೆ.
ಮಧ್ಯಾಹ್ನ 2-30ಕ್ಕೆ ಹೆಲಿಕಾಪ್ಟರ್ ಮೂಲಕ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಅಲ್ಲಿಂದ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.