ಮುದ್ದೇಬಿಹಾಳ: ತಾಲೂಕಿನ ಗಂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗೂರ ಗ್ರಾಮದಲ್ಲಿ ಮಳೆಯಿಂದಾಗಿ ರಸ್ತೆಗಳೆಲ್ಲಾ ಹದಗೆಟ್ಟಿವೆ. ಗ್ರಾಮಸ್ಥರು ನಿತ್ಯ ಅನಿವಾರ್ಯವಾಗಿ ಕೆಸರುಗದ್ದೆಯಂತಾದ ರಸ್ತೆಗಳಲ್ಲಿ ಸಂಚರಿಸುತ್ತಿದ್ದಾರೆ.
ಗ್ರಾಮೀಣ ಪ್ರದೇಶಗಳ ರಸ್ತೆಗಳ ಸುಧಾರಣೆಗೆ ಪ್ರತಿ ವರ್ಷವೂ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿವೆ. ಆದರೂ ಆ ಯೋಜನೆಗಳು ಸಮರ್ಪಕವಾಗಿ ಸದ್ಬಳಕೆ ಆಗುತ್ತಿದೆಯೇ ಎಂಬ ಪ್ರಶ್ನೆ, ಗಂಗೂರ ಗ್ರಾಮದ ಸಾರ್ವಜನಿಕರಲ್ಲಿ ಮೂಡಿದೆ.
ಇಂತಹ ರಸ್ತೆಯಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ, ಸಾಂಕ್ರಾಮಿಕ ರೋಗಗಳು ಹೆಚ್ಚಾಗುವ ಸಾಧ್ಯತೆ ಇದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ದುರಸ್ತಿ ಹಾಗೂ ವ್ಯವಸ್ಥಿತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.