ವಿಜಯಪುರ: ದೇವಸ್ಥಾನ, ಮಸೀದಿ ಹಾಗೂ ಚರ್ಚ್ಗಳಲ್ಲಿ ಸಾರ್ವಜನಿಕ ಪ್ರಾರ್ಥನೆಗೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದುವರೆಗೂ 304 ಜನ ವಿದೇಶದಿಂದ ಜಿಲ್ಲೆಗೆ ಆಗಮಿಸಿದ್ದು, 182 ಜನ ಹೋಮ್ ಕ್ವಾರಂಟೈನ್‌ನಲ್ಲಿ ಇದ್ದಾರೆ. ಹೊರ ರಾಜ್ಯದಿಂದ ಬರುವ ಸರ್ಕಾರಿ, ಖಾಸಗಿ ವಾಹನಗಳಿಗೆ ನಿರ್ಬಂಧ ಹಾಕಲಾಗಿದೆ. ಅಗತ್ಯ ಕೆಲಸಗಳಿಲ್ಲದೇ ಖಾಲಿ ತಿರುಗಾಡುವವರ ಮೇಲೆ ಕ್ರಮಕ್ಕೆ ಮುಂದಾಗುತ್ತೇವೆ. ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದು, ಸಾರ್ವಜನಿಕರು ಸಭೆ ಸಮಾರಂಭಕ್ಕೆ ಕಡಿವಾಣ ಹಾಕಲಾಗಿದೆ. ಒಂಭತ್ತು ಇಲಾಖೆಗಳನ್ನು ಹೊರತುಪಡಿಸಿ ಎಲ್ಲವನ್ನೂ ಬಂದ್ ಮಾಡಲಾಗಿದೆ ಎಂದರು.
ತರಕಾರಿ, ದಿನಸಿ ವಸ್ತುಗಳಿಗೆ ಸಡಿಲಿಕೆ ಇದೆ. ಒಂದು ಕಡೆ ಸಂತೆ ಮಾಡುವಾಗಿಲ್ಲ. ತಳ್ಳುವ ಗಾಡಿಯಲ್ಲಿ ತರಕಾರಿ ಮಾರಾಟ ಮಾಡಬೇಕು. ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗೆ ಕೂರೊನಾ ವೈರಸ್ ಪಾಸಿಟಿವ್ ಇದೆ ಎಂದು ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ. ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕ್ಕೆ ಮುಂದಾಗುತ್ತೇವೆ ಎಂದು ತಿಳಿಸಿದರು.
ಬಳಿಕ ಮಾತನಾಡಿದ ಎಸ್ಪಿ ಅನುಪಮ್ ಅಗರವಾಲ್ ಮಾತನಾಡಿ, ಕೊರೊನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ. ಅನಗತ್ಯವಾಗಿ ಯಾರೂ ಹೊರಗಡೆ ಓಡಾಡುವಂತಿಲ್ಲ. ಜಿಲ್ಲೆಯಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ ಎಂದು ಹೇಳಿದರು.