ಯಾದಗಿರಿ: ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ದುರ್ಘಟನೆ ಶಹಪುರ ತಾಲ್ಲೂಕಿನ ಭೀಮರಾಯನ ಗುಡಿ ಬಳಿ ನಡೆದಿದೆ.
ಸಾರಿಗೆ ಬಸ್ನ ಒಂದು ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಯಾವುದೇ ಸಾವುನೋವು ಸಂಭವಿಸಿಲ್ಲ. ಘಟನೆಯಲ್ಲಿ 10 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಶಹಪುರ ತಾಲ್ಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತ ಸ್ಥಳದಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ವಾಹನಗಳ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು. ಬಸ್ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಚಾಲಕನ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭೀಮರಾಯ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.