ಯಾದಗಿರಿ: ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಕ್ಕೆ 50 ಕೋಟಿ ರೂ. ಬಿಡುಗಡೆಯಾಗಿದೆ. ಅರ್ಹ ಫಲಾನುಭವಿಗಳಿಗೆ ನಿಗಮದ ಅನುದಾನ ತಲುಪುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ನಿಗಮದ ಜಿಲ್ಲಾ ವ್ಯವಸ್ಥಾಪಕರಿಗೆ ಮಾಜಿ ಸಚಿವರು ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಮತ್ತು ಇತರೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು. ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಲ್ಲಿ ಬೆಸ್ತ, ಕೋಳಿ, ಕಬ್ಬಲಿಗ, ಮೊಗವೀರ ಮತ್ತು ಇದರ ಉಪ ಜಾತಿಗೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಲ ಮತ್ತು ಸಹಾಯಧನದ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಬೇಕು. ಅರ್ಹ ಫಲಾನುಭವಿಗಳಿಗೆ ನಿಗಮದ ಅನುದಾನ ತಲುಪುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ನಿಗಮದ ಜಿಲ್ಲಾ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿದರು.
ಗುರುಮಠಕಲ್ ಮತಕ್ಷೇತ್ರದ ಕ್ವಾರಂಟೈನ್ ಕೇಂದ್ರವೊಂದರಲ್ಲಿ ವಲಸೆ ಕಾರ್ಮಿಕರಿಗೆ ಹಳಸಿದ ಅನ್ನ ನೀಡಿರುವ ಬಗ್ಗೆ ದೂರು ಕೇಳಿ ಬಂದಿದೆ. ಈ ಬಗ್ಗೆ ಪರಿಶೀಲಿಸಿ, ಸಂಬಂಧಪಟ್ಟ ಅಧಿಕಾರಿಗಳನ್ನು ತಕ್ಷಣ ಅಮಾನತು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ನಂತರ ಜಿಲ್ಲಾಧಿಕಾರಿ ಎಂ.ಕುರ್ಮಾರಾವ್ ಮಾತನಾಡಿ, ಜಿಲ್ಲಾಡಳಿತದ ವತಿಯಿಂದ ಜಿಲ್ಲೆಯಲ್ಲಿ ಕೊರೊನಾ ವೈರಸ್ ತಡೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಚಿಂಚನಸೂರಗೆ ಮಾಹಿತಿ ನೀಡಿದರು. ಸಭೆಯ ನಂತರ ಮಾತನಾಡಿದ ಬಾಬುರಾವ್ ಚಿಂಚನಸೂರ, ಕೊರೊನಾ ವೈರಸ್ ನಿರ್ಮೂಲನೆಗೆ ಇಲ್ಲಿಯವರೆಗೆ ಔಷಧಿ ಕಂಡು ಹಿಡಿದಿಲ್ಲ. ಪ್ರಧಾನಮಂತ್ರಿಗಳ ಸೂಚನೆಯಂತೆ ಸಾಮಾಜಿಕ ಅಂತರ ಪಾಲನೆ ಮಾಡುವುದು, ಮಾಸ್ಕ್ ಧರಿಸುವುದು ಮತ್ತು ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡುವುದೊಂದೇ ಪರಿಹಾರವಾಗಿದೆ. ಜಿಲ್ಲೆಯ ಸಾರ್ವಜನಿಕರು ಅನವಶ್ಯಕವಾಗಿ ಯಾರೂ ಹೊರಗಡೆ ಬಾರದೆ ಮನೆಯಲ್ಲಿರಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಮನವಿ ಮಾಡಿದರು.