ಸುರಪುರ: ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯು ಸುರಪುರ ತಾಲೂಕಿನ ಏವೂರು ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿತು.
ಪಂಚಾಯಿತಿ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರೈತ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಶರಣಗೌಡ ಗೂಗಲ್ ಮಾತನಾಡಿ, ಸರ್ಕಾರ ರಾಜ್ಯದಲ್ಲಿ ಆಡಳಿತ ನಡೆಸುವಲ್ಲಿ ವಿಫಲವಾಗಿದೆ. ಇದರಿಂದ ರೈತರು, ಕೂಲಿ ಕಾರ್ಮಿಕರು, ಜನಸಾಮಾನ್ಯರು ತೊಂದರೆಗೆ ಒಳಗಾಗಿದ್ದಾರೆ. ಕೊರೊನಾ ಹಾವಳಿ ನಿಯಂತ್ರಿಸುವಲ್ಲಿ ಸಹ ಸಂಪೂರ್ಣವಾಗಿ ವಿಫಲವಾಗಿದೆ. ನೂರಾರು ಜನ ಪ್ರಾಣ ಕಳೆದುಕೊಂಡಿದ್ದು, ಸಾವಿರಾರು ಜನ ಸೋಂಕಿನಿಂದ ಬಳಲುತ್ತಿದ್ದಾರೆ. ರೈತರಿಗೆ ಸರಿಯಾದ ಸೌಲಭ್ಯಗಳಿಲ್ಲದೆ ವ್ಯವಸಾಯ ಮಾಡದಂತಹ ಸ್ಥಿತಿ ಬಂದೊದಗಿದೆ. ರಾಜ್ಯದಲ್ಲಿ ಉದ್ಯೋಗ ಖಾತ್ರಿ ಯೋಜನೆ ಹಳ್ಳ ಹಿಡಿದಿದ್ದು, ಕಾರ್ಮಿಕರಿಗೆ ಕೆಲಸ ಸಿಗದೆ ಯೋಜನೆಯ ಹಣ ಉಳ್ಳವರ ಪಾಲಾಗುತ್ತಿದೆ ಎಂದು ಆರೋಪಿಸಿದರು.
ನಂತರ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಗ್ರಾಮ ಪಂಚಾಯಿತಿ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.