ಸುರಪುರ : ಹುಣಸಗಿ ತಾಲೂಕಿನ ಮಾರಲಬಾವಿಯಲ್ಲಿ ನಿರ್ಮಿಸುತ್ತಿರುವ ಅಂಗನವಾಡಿ ಕಟ್ಟಡ ನಾಲ್ಕು ವರ್ಷವಾದರೂ ಪೂರ್ಣಗೊಂಡಿಲ್ಲ. ಈ ಕೂಡಲೇ ಕಾಮಗಾರಿ ಪೂರ್ಣಗೊಳಿಸುವಂತೆ ಜಯ ಕರ್ನಾಟಕ ರಕ್ಷಣಾ ಸೇನೆ ಆಗ್ರಹಿಸಿದೆ.
ನಾಲ್ಕು ವರ್ಷಗಳ ಹಿಂದೆ ಆರಂಭಗೊಂಡ ಕಾಮಗಾರಿಯೊಂದು ಇನ್ನೂ ಮುಗಿಯದೆ ನಿರ್ಲಕ್ಷ್ಯಕ್ಕೊಳಗಾಗಿರುವ ಘಟನೆ ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಾರಲಬಾವಿ ಗ್ರಾಮದಲ್ಲಿ 9 ಲಕ್ಷ ರೂಪಾಯಿಗಳ ಅನುದಾನದಲ್ಲಿ ಅಂಗನವಾಡಿ ಕೇಂದ್ರದ ಕಟ್ಟಡದ ನಿರ್ಮಾಣ ಕಾಮಗಾರಿ 4 ವರ್ಷಗಳ ಹಿಂದೆ ಆರಂಭಿಸಲಾಗಿದೆ.
2016-17ನೇ ಸಾಲಿನಲ್ಲಿ ಕರ್ನಾಟಕ ಭೂ ಸೇನಾ ನಿಗಮದ ಅಡಿಯಲ್ಲಿ ಕಾಮಗಾರಿ ಆರಂಭಿಸಲಾಗಿದ್ದು, ನಾಲ್ಕು ವರ್ಷವಾದರೂ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ತೋರಿದ್ದರಿಂದ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಕುರಿತು ಜಯ ಕರ್ನಾಟಕ ರಕ್ಷಣಾ ಸೇನೆಯ ತಾಲೂಕು ಉಪಾಧ್ಯಕ್ಷ ಶಂಕರಗೌಡ ಮಾಲಿ ಪಾಟೀಲ್ ಮಾತನಾಡಿ, ಲ್ಯಾಂಡ್ ಆರ್ಮಿ ಸಂಸ್ಥೆಗೆ ಅಂಗನವಾಡಿ ಕಟ್ಟಡ ಕಾಮಗಾರಿಯ ಜವಾಬ್ದಾರಿಯನ್ನು ವಹಿಸಲಾಗಿದೆ. ಆದರೆ ನಾಲ್ಕು ವರ್ಷವಾದರೂ ಕಾಮಗಾರಿ ಮುಗಿಸದೆ ಅನುದಾನ ದುರುಪಯೋಗ ಮಾಡಿಕೊಳ್ಳಲಾಗಿದೆ. ಕೂಡಲೆ ಕಾಮಗಾರಿ ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಸಂಘಟನೆಯಿಂದ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಕರ್ನಾಟಕ ಭೂ ಸೇನಾ ನಿಗಮ ತಾಲೂಕಿನ ಅನೇಕ ಕಡೆಗಳಲ್ಲಿ ಕಾಮಗಾರಿ ಅರ್ಧಕ್ಕೆ ನಿಲ್ಲಿಸಿರುವುದು ಕಂಡು ಬಂದಿದೆ.