ಯಾದಗಿರಿ: ಪೌರತ್ವ (ತಿದ್ದುಪಡಿ) ಕಾಯ್ದೆಯ ಕುರಿತು ಜಾಗೃತಿ ಅಭಿಯಾನವನ್ನು ಜನವರಿ11 ರಂದು ನಗರದ ಸ್ವಪ್ನ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಚಂದ್ರಶೇಖರ ಮಾಗನೂರ ತಿಳಿಸಿದರು.
ನಗರದ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಅಭಿಯಾನ ನಡೆಯಲಿದ್ದು, ಕಾಯ್ದೆಯ ಬಗ್ಗೆ ಸಾರ್ವಜನಿಕರಲ್ಲಿರುವ ಗೊಂದಲಗಳನ್ನು ನಿವಾರಣೆ ಮಾಡುವ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದರು.
ದೇಶದ ಸುಭದ್ರತೆಗಾಗಿ ಈ ಕಾಯ್ದೆ ಜಾರಿಗೆ ತರಲಾಗಿದೆಯೇ ಹೊರತು, ಇದರಲ್ಲಿ ಯಾವುದೇ ದುರುದ್ದೇಶ ಇಲ್ಲ. ಜನರಿಗೆ ಕಾಂಗ್ರೆಸ್ ಪಕ್ಷ ಸೇರಿದಂತೆ ಹಲವು ಪಕ್ಷಗಳು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದ್ರು. ಕಾರ್ಯಕ್ರಮದಲ್ಲಿ 20 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.