ಯಾದಗಿರಿ: ತಾಲೂಕಿನ ರಾಮಸಮುದ್ರ ಗ್ರಾಮದ ಹತ್ತಿ ಜಮೀನಿನಲ್ಲಿ ಮಕ್ಕಳು ಹತ್ತಿ ಬಿಡಿಸುತ್ತಿದ್ದ ವೇಳೆ ಅಧಿಕಾರಿಗಳ ತಂಡ ದಾಳಿ ಮಾಡಿ, 40ಕ್ಕೂ ಹೆಚ್ಚು ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಿದ್ದಾರೆ.
ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ರಘುವೀರಸಿಂಗ್ ಠಾಕೂರ ಹಾಗೂ ಕಾರ್ಮಿಕ ನಿರೀಕ್ಷಕ ಶಿವಶಂಕರ ತಳವಾರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ದಾಳಿ ಮಾಡಿದೆ. ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಆದೇಶದ ಮೇರೆಗೆ ರಾಮಸಮುದ್ರ ಗ್ರಾಮದ ಹಲವೆಡೆ ಅಧಿಕಾರಿಗಳಿಂದ ದಾಳಿ ನಡೆದಿದೆ. ಬಾಲ ಕಾರ್ಮಿಕರ ರಕ್ಷಣೆ ಜೊತೆ ಟಂಟಂ ವಾಹನಗಳಲ್ಲಿ ಕಾನೂನು ಬಾಹಿರವಾಗಿ ಹೆಚ್ಚಿನ ಪ್ರಮಾಣದಲ್ಲಿ ಕಾರ್ಮಿಕರನ್ನು ತುಂಬಿಕೊಂಡು ಹೋಗುತ್ತಿರುವಾಗ ಅಧಿಕಾರಿಗಳಿಂದ 6 ಟಂಟಂಗಳನ್ನ ಜಪ್ತಿ ಮಾಡಿಕೊಳ್ಳಲಾಗಿದೆ.
ಶಾಲೆ ಬಿಟ್ಟ ಮಕ್ಕಳನ್ನು ಮತ್ತೆ ಶಾಲೆಗೆ ಕಳುಹಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧ ಎಂದು ಮಕ್ಕಳ ಪೋಷಕರಿಗೆ ಎಚ್ಚರಿಕೆ ನೀಡಿದ್ದಾರೆ.