ಸುರಪುರ (ಯಾದಗಿರಿ): ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಮಸೂದೆಗಳನ್ನು ರದ್ದುಗೊಳಿಸುವಂತೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸುರಪುರ ತಾಲೂಕು ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ವಸಂತ ಮಹಲ್ ಆವರಣದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ, ಮಹಾತ್ಮ ಗಾಂಧಿ ವೃತ್ತದ ಮೂಲಕ ಕಾಂಗ್ರೆಸ್ ಕಚೇರಿ ತಲುಪಿತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿವೆ. 75 ದಿನಗಳಿಂದ ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲದ ಕೇಂದ್ರ ಸರ್ಕಾರ, ಕೃಷಿ ಮಸೂದೆಗಳನ್ನು ಜಾರಿಗೆ ತರುವ ಮೂಲಕ ದೇಶದ ರೈತರನ್ನು ನಿರ್ನಾಮ ಮಾಡಲು ಹೊರಟಿದೆ.
ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ ಹಾಗೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕೂಡ ನಿತ್ಯವೂ ಏರಿಕೆ ಕಾಣುತ್ತಿವೆ. ಕಚ್ಚಾ ತೈಲ ಬೆಲೆ ಕಡಿಮೆ ಇದ್ದರೂ ಕೂಡ ನಿತ್ಯವೂ ಬೆಲೆ ಏರಿಸುವ ಮೂಲಕ ದೇಶದಲ್ಲಿನ ಬಡವರ ಜೀವನದ ಜೊತೆ ಚೆಲ್ಲಾಟವಾಡುತ್ತಿವೆ ಎಂದು ಆರೋಪಿಸಿದರು.
ಓದಿ: ನೋಟಿಸ್ ನನ್ನ ಕೈ ಸೇರಿಲ್ಲ, ನಾನು ಯಾವುದಕ್ಕೂ ಅಂಜುವುದಿಲ್ಲ; ಯತ್ನಾಳ್ ಗುಡುಗು
ಕೂಡಲೇ ಕೃಷಿ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಬೇಕು ಹಾಗೂ ಅಗತ್ಯ ವಸ್ತುಗಳ ಬೆಲೆಯನ್ನು ಇಳಿಸಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ ಪಕ್ಷ ದೇಶಾದ್ಯಂತ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದರು.