ಯಾದಗಿರಿ: ಯಾದಗಿರಿ ಮತಕ್ಷೇತ್ರದ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕು ದೃಢಪಟ್ಟ ಕಾರಣ ವೆಂಕಟರೆಡ್ಡಿ ಮುದ್ನಾಳ ಅವರು ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ ಸ್ವಾತಂತ್ರ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದ ಶಾಸಕ ವೆಂಕಟರೆಡ್ಡಿ ಮುದ್ನಾಳ, ಬೆಳಗ್ಗೆ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದರು. ಶಾಸಕರ ಕೋವಿಡ್ ವರದಿ ಪಾಸಿಟಿವ್ ಬಂದಿದ್ದು ಚಿಕಿತ್ಸೆಗಾಗಿ ಮುದ್ನಾಳ ಬೆಂಗಳೂರಿಗೆ ತೆರಳಿ ಪೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆಗಸ್ಟ್ 12 ರಂದು ಶಾಸಕ ರಾಜುಗೌಡರ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಭಾಗಿಯಾಗಿದ್ದರು. ಬೆಂಗಳೂರಿನಿಂದ ಯಾದಗಿರಿಗೆ ವಾಪಸ್ ಆದ ಎರಡು ದಿನಗಳ ಬಳಿಕ ಕೋವಿಡ್ ಟೆಸ್ಟ್ ಮಾಡಿಕೊಂಡಿದ್ದರು.
ಪ್ರಾಥಮಿಕ ಸಂಪರ್ಕದಲ್ಲಿದ್ದವರು ಮುಂಜಾಗ್ರತಾ ಕ್ರಮವಾಗಿ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಶಾಸಕರು ಮನವಿ ಮಾಡಿಕೊಂಡಿದ್ದಾರೆ.