ಸುರಪುರ : ಪ್ರತಿ ಶನಿವಾರ ಮತ್ತು ಭಾನುವಾರ ಸಂಜೆ 6 ರಿಂದ 7 ಗಂಟೆಯವರೆಗೆ ಜೀ ಕನ್ನಡದಲ್ಲಿ ಪ್ರಸಾರವಾಗುವ ಮಹಾನಾಯಕ ಧಾರಾವಾಹಿ ಸಂದರ್ಭದಲ್ಲಿ ವಿದ್ಯುತ್ ಕಡಿತಗೊಳಿಸಬಾರದು ಎಂದು ಆಗ್ರಹಿಸಿ ನಗರದ ರಂಗಂಪೇಟೆಯಲ್ಲಿರುವ ಜೆಸ್ಕಾಂ ಕಚೇರಿ ಮುಂದೆ ನಗರಸಭೆ ಸದಸ್ಯರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕನ್ನಡದ ಖಾಸಗಿ ವಾಹಿನಿಯೊಂದರಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಭೀಮ್ರಾವ್ ಅಂಬೇಡ್ಕರ್ ಅವರ ಜೀವನಾಧಾರಿತ 'ಮಹಾನಾಯಕ' ಎಂಬ ಧಾರಾವಾಹಿ ಪ್ರಸಾರವಾಗುತ್ತಿದೆ. ಈ ಧಾರಾವಾಹಿ ನಾಡಿನ ಕೋಟ್ಯಂತರ ಜನ ಅಂಬೇಡ್ಕರ್ ಅಭಿಮಾನಿಗಳು ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದಾರೆ.
ಹಾಗಾಗಿ ಪ್ರತಿ ಶನಿವಾರ ಮತ್ತು ಭಾನುವಾರ ಸಂಜೆ 6 ರಿಂದ 7 ಗಂಟೆಯವರೆಗೆ ವಿದ್ಯುತ್ ಕಡಿತ ಮಾಡಬಾರದು ಎಂದು ಆಗ್ರಹಿಸಿ, ಮನವಿ ಪತ್ರ ನೀಡಿದರು. ಒಂದು ವೇಳೆ ವಿದ್ಯುತ್ ಕಡಿತಗೊಳಿಸಿದಲ್ಲಿ ಜೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.