ಯಾದಗಿರಿ: ಸರ್ಕಾರ ಕಾಲಕಾಲಕ್ಕೆ ಹೊರಡಿಸುವ ಸೂಚನೆಗಳನ್ನು ಪಾಲಿಸುವ ಮೂಲಕ ಕೊರೊನಾ ಮುಕ್ತ ಜಿಲ್ಲೆಯನ್ನಾಗಿಸುವುದು ಜಿಲ್ಲೆಯ ಪ್ರತಿಯೊಬ್ಬ ಜನಪ್ರತಿನಿಧಿಗಳು, ಅಧಿಕಾರಿಗಳ ಹಾಗೂ ಸಾರ್ವಜನಿಕರ ಜವಾಬ್ದಾರಿ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಕರೆ ನೀಡಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ತಡೆಗಟ್ಟಲು ಜಿಲ್ಲಾಡಳಿತ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಲಾಕ್‍ಡೌನ್ ಸಡಿಲಿಕೆ ಮಾಡಿರುವುದರಿಂದ ಬೇರೆ ರಾಜ್ಯಗಳಿಂದ ಯಾದಗಿರಿ ಜಿಲ್ಲೆಗೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಜಿಲ್ಲಾಡಳಿತ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡು ಇವರನ್ನು ಕುಡಿಯುವ ನೀರು ಮತ್ತು ಶೌಚಾಲಯದ ವ್ಯವಸ್ಥೆ ಇರುವ ವಸತಿ ನಿಲಯ, ಶಾಲೆ ಅಥವಾ ಸಾರ್ವಜನಿಕರ ಕಟ್ಟಡಗಳಲ್ಲಿ ಕ್ವಾರಂಟೈನ್ ಮಾಡಬೇಕು. ಆಹಾರ ಸೇರಿದಂತೆ ಅಗತ್ಯ ಸೌಕರ್ಯಗಳನ್ನು ನೀಡಬೇಕು ಎಂದು ಅವರು ಸೂಚಿಸಿದರು.
ಹೊರ ರಾಜ್ಯಗಳಿಂದ ಬಂದವರನ್ನು ರಾಜ್ಯವಾರು ವಿಂಗಡಣೆ ಮಾಡಿ ಕ್ವಾರಂಟೈನ್ ಮಾಡಬೇಕು. ಇವರೆಲ್ಲರಿಗೆ ಕೋವಿಡ್-19 ಪರೀಕ್ಷೆ ಕಡ್ಡಾಯ. ಪರೀಕ್ಷೆಯಲ್ಲಿ ಗರ್ಭಿಣಿಯರು, ಬಾಣಂತಿಯರು, 10 ವರ್ಷಕ್ಕಿಂತ ಕೆಳಗಿನವರು ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮೊದಲ ಆದ್ಯತೆ ನೀಡಿ ಮತ್ತು ಇವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಹೇಳಿದ್ರು.
ಅಹಮದಾಬಾದ್‍ನಿಂದ ಯಾದಗಿರಿ ಜಿಲ್ಲೆಗೆ ಮರಳಿದ ಇಬ್ಬರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಬಗ್ಗೆ ಜನರು ಆತಂಕಪಡುವ ಅಗತ್ಯವಿಲ್ಲ. ಸರ್ಕಾರದ ಸೂಚನೆಯಂತೆ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸುರಪುರದ ಆಸರ್‍ಮೊಹಲ್ಲಾವನ್ನು ಕಂಟೇನ್ಮೆಂಟ್ ಝೋನ್ ಎಂದು ಘೋಷಣೆ ಮಾಡಿದ್ದು, ಮನೆ ಮನೆ ಸಮೀಕ್ಷೆಗೆ ಸೂಚಿಸಲಾಗಿದೆ.
ಸಭೆಯಲ್ಲಿ ಶಾಸಕರಾದ ವೆಂಕಟರೆಡ್ಡಿ ಮುದ್ನಾಳ, ರಾಜುಗೌಡ, ಶರಣಬಸಪ್ಪ ದರ್ಶನಾಪುರ, ಸಂಸದ ರಾಜಾ ಅಮರೇಶ್ವರ ನಾಯಕ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ್ ವಜ್ಜಲ್, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.