ಯಾದಗಿರಿ: ಹೊಸದಾಗಿ ನಿರ್ಮಾಣವಾಗಿರುವ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಪರೀಕ್ಷೆ ನಡೆಸುವ ಟೆಸ್ಟ್ ಲ್ಯಾಬ್ ಸ್ಥಾಪನೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಮುದ್ನಾಳ ಸಮೀಪದ ನೂತನ ಜಿಲ್ಲಾಸ್ಪತ್ರೆಗೆ ಗುರುವಾರ ಭೇಟಿ ನೀಡಿದ ಅವರು, ಕೋವಿಡ್-19 ಟೆಸ್ಟ್ ಲ್ಯಾಬ್ ಸ್ಥಾಪನೆ ಮತ್ತು ಆಸ್ಪತ್ರೆಯಲ್ಲಿ ಆಕ್ಸಿಜನ್ ಪೈಪ್‍ಲೈನ್ ಕಾಮಗಾರಿ ಕೈಗೊಳ್ಳಲು ಪರಿಶೀಲನೆ ನಡೆಸಿದರು. ಜಿಲ್ಲಾಡಳಿತದ ವತಿಯಿಂದ ಮುಂಜಾಗ್ರತಾ ಕ್ರಮವಾಗಿ ಕೊರೊನಾ ವೈರಸ್ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಬೇಕಿದೆ. ಈ ನಿಟ್ಟಿನಲ್ಲಿ ಕೋವಿಡ್-19 ಪರೀಕ್ಷೆಗಳನ್ನು ಹೆಚ್ಚಾಗಿ ಕೈಗೊಳ್ಳಬೇಕಿರುವ ಕಾರಣ ಟೆಸ್ಟ್ ಲ್ಯಾಬ್ ಸ್ಥಾಪನೆಗೆ ಬೇಕಾದ ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅವರು ಸೂಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ನಾರಾಯಣಪ್ಪ ಕೆ.ಹೆಚ್.ಎಸ್.ಡಿ.ಆರ್.ಪಿ ಕಾರ್ಯ ನಿರ್ವಾಹಕ ಇಂಜಿನಿಯರ್ ಹಾಗೂ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರಾದ ಕಿರಣ್ ಸೇರಿದಂತೆ ಇನ್ನಿತರರು ಹಾಜರಿದ್ದರು.