ಯಾದಗಿರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಯಾದಗಿರಿ ಜಿಲ್ಲಾಸ್ಪತ್ರೆಯ ಎದುರು ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರು ಪ್ರತಿಭಟಿಸಿದರು.
ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕೆಂಬ ಸುಪ್ರಿಂಕೋರ್ಟ್ ಆದೇಶವಿದ್ದರೂ ಸಹ ರಾಜ್ಯ ಸರ್ಕಾರ ನಮ್ಮನ್ನು ಕಡೆಗಣಿಸುತ್ತಿದೆ. ಸಮಾನ ವೇತನ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಪ್ರತಿಭಟನೆ ಮೂಲಕ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು.
ಸದ್ಯ ಕೋವಿಡ್ ಸಮಯದಲ್ಲಿ ಗುತ್ತಿಗೆ ನೌಕರರು ಸಹ ತಮ್ಮ ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ್ದು, ಸರಿಯಾದ ವೇತನ ಸಿಗದೆ ಸಂಕಷ್ಠಕ್ಕೆ ಸಿಲುಕಿದ್ದಾರೆ. ಕಳೆದ 13 ದಿನಗಳಿಂದ ಗುತ್ತಿಗೆ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿದ್ದು, ಈವರೆಗೂ ಸಹ ಯಾವುದೇ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ನಮ್ಮ ಅಳಲನ್ನು ಕೇಳಲು ಬಂದಿಲ್ಲ ಎಂದು ಗುತ್ತಿಗೆ ನೌಕರರು ತಮ್ಮ ನೋವನ್ನು ತೋಡಿಕೊಂಡಿದ್ದಾರೆ.
ಒಂದು ವೇಳೆ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಲು ಮುಂದಾಗದಿದ್ರೆ, ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.