ಯಾದಗಿರಿ: ಸುರಪುರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾರ್ಗದರ್ಶನದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ್ ಬಾಚಿಮಟ್ಟಿ ಅವರು ಬಡ ಜನತೆಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿದ್ದಾರೆ.
ಕೊರೊನಾ ಲಾಕ್‌ಡೌನ್ ಘೋಷಣೆಯಿಂದಾಗಿ ಜನರು ಮನೆಯಿಂದ ಹೊರಗೆ ಬರಲಾಗುತ್ತಿಲ್ಲ. ಬದುಕಿಗೆ ಅವಶ್ಯಕ ವಸ್ತುಗಳಿಲ್ಲದೆ ತೊಂದರೆ ಪಡುತ್ತಿರುವ ತಾಲೂಕಿನ ನಲವತ್ತಕ್ಕೂ ಹೆಚ್ಚು ಗ್ರಾಮಗಳ ಬಡ ಜನತೆಗೆ ಆಹಾರ ಧಾನ್ಯಗಳ ಮತ್ತು ಇತರೆ ಅಗತ್ಯ ವಸ್ತುಗಳನ್ನು ವಿತರಿಸಲಾಗುತ್ತಿದೆ ಎಂದು ಸುರಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ ಬಾಚಿಮಟ್ಟಿ ತಿಳಿಸಿದರು.
ತಾಲೂಕಿನ ಮುದನೂರ ಗ್ರಾಮದಲ್ಲಿನ ಬಡ ಕುಟುಂಬಗಳಿಗೆ ಅಕ್ಕಿ, ಬೇಳೆ, ಅಡುಗೆ ಎಣ್ಣೆ, ತರಕಾರಿ, ಸಾಬೂನು, ಕೊಬ್ಬರಿ ಎಣ್ಣೆ ಸೇರಿದಂತೆ ಮತ್ತಿತರ ಅಗತ್ಯ ವಸ್ತುಗಳ ಕಿಟ್ ವಿತರಿಸಲಾಗಿದೆ. ಆದ್ರೆ ಇಲ್ಲಿ ಜನರ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಗುಂಪು ಗುಂಪಾಗಿ ಸೇರಿದ್ದರು. ಇದು ಅಪಾಯಕ್ಕೆ ಆಹ್ವಾನ ನೀಡುವಂತಿದೆ.