ಸುರಪುರ (ಯಾದಗಿರಿ): ರಾಜ್ಯದಲ್ಲಿ ಜಾರಿಗೆ ತರಲು ಮುಂದಾಗಿರುವ ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಕೃಷಿ ವಲಯದ ಮೇಲೆ ದೊಡ್ಡ ಪರಿಣಾಮ ಬೀರಲಿದೆ. ಆದ್ದರಿಂದ ಕೂಡಲೇ ಎಪಿಎಂಸಿ ಕಾಯ್ದೆ ತಿದ್ದುಪಡಿ ಕೈ ಬಿಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ವಿಭಾಗೀಯ ಕಾರ್ಯದರ್ಶಿ ಮಲ್ಲಿಕಾರ್ಜುನ ಸತ್ಯಂಪೇಟೆ ಸರಕಾರಕ್ಕೆ ಆಗ್ರಹಿಸಿದರು.
ನಗರದ ತಹಶೀಲ್ದಾರ್ ಕಚೇರಿ ಮುಂದೆ ಸಂಘದಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಅವರು, ಕೊರೊನಾ ಲಾಕ್‌ಡೌನ್ ರೈತರ ಮೇಲೆ ದೊಡ್ಡ ಹೊರೆಯಾಗಿದ್ದು, ಸರಕಾರ ಎಲ್ಲಾ ಬ್ಯಾಂಕ್ಗಳಲ್ಲಿನ ಸಾಲ ಮನ್ನಾ ಮಾಡಬೇಕು. ಕೊರೊನಾ ಲಾಕ್‌ಡೌನ್ ಘೋಷಣೆಯಾಗಿ ಜನರಿಗೆ ಕೆಲಸವಿಲ್ಲದೆ ಜೀವನ ನಡೆಸಲು ತೊಂದರೆಯಲ್ಲಿದ್ದಾರೆ. ಆದ್ದರಿಂದ ಅಗತ್ಯ ವಸ್ತುಗಳನ್ನು ಉಚಿತವಾಗಿ ವಿತರಿಸಬೇಕು ಮತ್ತು ಮುಂಗಾರು ಆರಂಭಗೊಳ್ಳುತ್ತಿರುವುದರಿಂದ ರೈತರಿಗೆ ಉಚಿತ ಬೀಜ, ಗೊಬ್ಬರ ನೀಡಬೇಕೆಂದು ಆಗ್ರಹಿಸಿದರು.
ಕೆಲ ಸಮಯ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ನಂತರ ಪ್ರಧಾನಮಂತ್ರಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ್ ನಿಂಗಣ್ಣ ಬಿರಾದಾರ್ ಮೂಲಕ ಸಲ್ಲಿಸಿದರು. ಕರ್ನಾಟಕ ರಾಜ್ಯ ರೈತ ಸಂಘದಿಂದ ಹುಣಸಗಿ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿದರು.