ಯಾದಗಿರಿ : ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪೊಲೀಸ್ ಸಿಬ್ಬಂದಿಯನ್ನು ಗ್ರಾಮಸ್ಥರು ತಡೆದು ತರಾಟೆಗೆ ತೆಗೆದುಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದ್ದು, ವಿಡಿಯೋ ಈಗ ವೈರಲ್ ಆಗಿದೆ.
ಜಿಲ್ಲೆಯ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಚೇಲೇರಿ ಗ್ರಾಮದ ಹಳ್ಳದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪೊಲೀಸ್ ಸಿಬ್ಬಂದಿಯನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಸೈದಾಪುರ ಪೊಲೀಸ್ ಸಿಬ್ಬಂದಿ ರವಿ ರಾಥೋಡ ವಿರುದ್ಧ ಈ ಆರೋಪ ಕೇಳಿ ಬಂದಿದೆ. ಇವರು ದಿನನಿತ್ಯ ಚೇಲೇರಿ ಹಳ್ಳದಿಂದ ಮರಳು ಸಾಗಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಇಂದು ಖುದ್ದಾಗಿ ಗ್ರಾಮಸ್ಥರ ಕೈಗೆ ಸಿಕ್ಕಿ ಹಾಕಿಕೊಂಡ ಇವರಿಗೆ ಸಮಾಜವನ್ನು ಕಾಯಬೇಕಾದ ನೀವೇ ಹೀಗೆ ಮಾಡಿದರೆ ಹೇಗೆ ಸ್ವಾಮಿ ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಖುಷಿಕೇಶ ಭಗವಾನ್ಗೆ ಸಂಪರ್ಕಿದಾಗ ತನಿಖೆಯನ್ನು ಕೈಗೊಂಡಿದ್ದು, ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದ್ದಾರೆ.