ಯಾದಗಿರಿ: ಆರೋಗ್ಯಕರ ಜೀವನಕ್ಕಾಗಿ ಪ್ರತಿಯೊಬ್ಬರೂ ಮಾದಕ ವಸ್ತುಗಳಿಂದ ದೂರವಿರಬೇಕು. ವ್ಯಸನ ಮುಕ್ತರಾದಲ್ಲಿ ಮಾತ್ರ ಉತ್ತಮ ನಾಗರಿಕ ಸಮಾಜ ನಿರ್ಮಾಣ ಸಾಧ್ಯ ಎಂದು ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಸಲಹೆ ನೀಡಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಾಲಯ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಮಾನಸಿಕ ವಿಭಾಗ) ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಸದ್ಯದ ಪರಿಸ್ಥಿತಿಯಲ್ಲಿ ಕೊರೊನಾ ವೈರಸ್ ಮಹಾಮಾರಿ ಎಂದು ಹೇಳುತ್ತೇವೆ. ಆದರೆ, ಮನುಷ್ಯನಿಗೆ ಕೊರೊನಾಗಿಂತ ಮಾದಕ ವಸ್ತುಗಳಿಗೆ ದಾಸನಾಗುವುದು ಅತ್ಯಂತ ಅಪಾಯಕಾರಿ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಮಾತನಾಡಿ, ಪ್ರತಿಯೊಬ್ಬರಿಗೂ ಅವರವರ ಜೀವನದಲ್ಲಿ ತಮ್ಮದೇ ಆದ ಮಾನಸಿಕ ಒತ್ತಡಗಳಿರುತ್ತವೆ. ಒತ್ತಡದ ನೆಪದಲ್ಲಿ ಮಾದಕ ವಸ್ತುಗಳಿಗೆ ಅಂಟಿಕೊಳ್ಳುವುದು ತಪ್ಪು. ಇತ್ತೀಚೆಗೆ ಮಕ್ಕಳು ಕೂಡ ಗುಟ್ಕಾ ಸೇವನೆ ಮಾಡುತ್ತಿದ್ದಾರೆ. ಇದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅವರಲ್ಲಿ ಅರಿವು ಮೂಡಿಸಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಶಿವಲಿಂಗಪ್ಪ ಪುಟಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಪ್ರಭಾರ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನೀಲಮ್ಮ ಎಸ್.ರೆಡ್ಡಿ ಅವರು ಉಪಸ್ಥಿತರಿದ್ದರು.