ಯಾದಗಿರಿ: ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಕಲ್ಪಿಸಿ, ದಲಿತ ಕೇರಿಗಳನ್ನ ಅಭಿವೃದ್ಧಿಪಡಿಸಲು ಅನಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದರು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಜಿಲ್ಲೆಯ ಸುರಪುರ, ಶಹಪುರ, ಹುಣಾಗಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮಗಳಲ್ಲಿ ಜಾತಿ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಮೂಲಭೂತ ಸೌಕರ್ಯಗಳಿಂದ ವಂಚಿತವಾದ ದಲಿತ ಕೇರಿಗಳಿಗೆ ಪರಿಶಿಷ್ಟ ಜಾತಿ, ಪಂಗಡದ ಜನಾಂಗದವರನ್ನ ಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿಕೊಡುವ ಮೂಲಕ ಸರ್ಕಾರ ದಲಿತ ಕೇರಿಗಳ ಅಭಿವೃದ್ಧಿಗೆ ಅನುವು ಮಾಡಿಕೊಡಬೇಕು ಎಂದು ಪ್ರತಿಭಟನಾನಿರತ ದಲಿತ ಸಂಘರ್ಷ ಸಮಿತಿ ಆಗ್ರಹಿಸಿತು. ಹಿಂದುಳಿದ ದಲಿತ ಕೇರಿಗಳ ಅಭಿವೃದ್ಧಿ ದೃಷ್ಟಿಯಿಂದ ಈ ಕುರಿತು ಕೂಲಂಕಷವಾಗಿ ಪರಿಶೀಲಿಸಿ ನಮಗೆ ನ್ಯಾಯ ಒದಗಿಸಿಕೊಡಬೇಕು ಎಂದು ಪ್ರತಿಭಟನೆ ಮೂಲಕ ಮನವಿ ಮಾಡಿದರು.
ಪ್ರತಿಭಟನೆ ಬಳಿಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.